Tuesday, May 26, 2026
Google search engine

Homeರಾಜ್ಯಸುದ್ದಿಜಾಲಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಸಿಇಓ ನಂದಿನಿ ಅಧಿಕಾರಿಗಳಿಗೆ ಸೂಚನೆ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಸಿಇಓ ನಂದಿನಿ ಅಧಿಕಾರಿಗಳಿಗೆ ಸೂಚನೆ

ಮಂಡ್ಯ : ಜಿಲ್ಲೆಯ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನಿಯಮಾನುಸಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗದ ಅಧಿಕಾರಿಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್‌. ಸೂಚಿಸಿದರು.

 ಜಿ.ಪಂ. ಸಿಇಓರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ನ ಕೆಸ್ವಾನ್‌ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆದ್ಯತೆ ಹಾಗೂ ಅವಶ್ಯಕತೆಯ ಆಧಾರದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಯಾವುದೇ ಗ್ರಾಮದಲ್ಲಿ ನೀರಿನ ಗುಣಮಟ್ಟದಲ್ಲಾಗಲೀ, ನೀರಿನ ಪ್ರಮಾಣದಲ್ಲಾಗಲೀ ವ್ಯತ್ಯಾಸವಾಗಬಾರದು ಹಾಗೂ ಕಟ್ಟ ಕಡೆಯ ವ್ಯಕ್ತಿಗೂ ನಿಗದಿತ ಪ್ರಮಾಣದ ನೀರು ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿರುವ ಗ್ರಾಮಗಳಲ್ಲಿ ಸಮಸ್ಯೆಯ ಸ್ವರೂಪ, ಸಮಸ್ಯೆ ಪರಿಹರಿಸಲು ತೆಗೆದುಕೊಳ್ಳಬಹುದಾದ ಕ್ರಮ ಹಾಗೂ ಸದರಿ ಕ್ರಮಕ್ಕೆ ತಗಲುವ ವೆಚ್ಚದ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ, ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಪೈಪ್‌ಲೈನ್‌ ದುರಸ್ತಿ, ವಿದ್ಯುತ್‌ ಸಮಸ್ಯೆಗಳಿಂದ ನೀರು ಸರಬರಾಜಿನಲ್ಲಿ ಉಂಟಾಗುತ್ತಿರುವ ವ್ಯತ್ಯಯ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯವಿರುವ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಇಓ ಸೂಚಿಸಿದರು.

ಗ್ರಾಮಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗಿರುವ ಪ್ರದೇಶಗಳನ್ನು ಗುರುತಿಸಿ, ಹೊಸ ಬೋರ್‌ವೆಲ್‌ ಕೊರೆಸುವುದು, ಕೆಟ್ಟು ನಿಂತಿರುವ ಮೋಟಾರ್‌ ಮತ್ತು ಪಂಪ್‌ಸೆಟ್‌ಗಳನ್ನು ದುರಸ್ತಿಗೊಳಿಸುವುದು, ಅಗತ್ಯವಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು, ತಾತ್ಕಾಲಿಕ ಪೈಪ್‌ಲೈನ್‌ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ತುರ್ತು ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ತಿಳಿಸಲಾಯಿತು.

ಸಹಾಯವಾಣಿಗೆ ಸ್ವೀಕೃತವಾಗುವ ದೂರು/ಮನವಿಗಳ ವಿವರ ನೀಡಿ: ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರುಗಳು ಮತ್ತು ಮನವಿಗಳನ್ನು ತಕ್ಷಣ ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಪ್ರತೀ ವಾರ ಸ್ವೀಕೃತವಾದ ದೂರುಗಳು ಮತ್ತು ಅವುಗಳಿಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಪ್ರತೀ ವಾರ ಮಾಹಿತಿ ಸಲ್ಲಿಸುವಂತೆ ಅಧಿಕಾರಿಗಳು ತಿಳಿಸಿದರು.

ಜಲ ಜೀವನ ಮಿಷನ್‌ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ತಾಲ್ಲೂಕುವಾರು ಪರಿಶೀಲನೆ ನಡೆಸಿ, ಮನೆಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಕಾಮಗಾರಿಗಳಲ್ಲಿ ವಿಳಂಬವಾಗುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.

ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿಗಳ ಪ್ರಗತಿಯನ್ನು ಕೂಡ ಸಭೆಯಲ್ಲಿ ಪರಿಶೀಲಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ಹಾಗೂ ಸುರಕ್ಷಿತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಬೇಕೆಂದು ಸಿಇಓರವರು ಸೂಚಿಸಿದರು.

ಇದೇ ವೇಳೆ ನೀರಿನ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಎಫ್.ಟಿ.ಕೆ. (Field Test Kit) ಮೂಲಕ ಗ್ರಾಮ ಮಟ್ಟದಲ್ಲಿ ನೀರಿನ ಪರೀಕ್ಷೆ ನಡೆಸುವ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಸಹಕಾರದೊಂದಿಗೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಶ್ರೀ ಪ್ರಮೋದ್‌ ಕುಮಾರ್‌ ಎನ್.ಜಿ., ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಶ್ಮಿ, ಮಧುಸೂದನ್‌, ರಂಗಸ್ವಾಮಿ, ಗಣೇಶ್‌ ಹೆಗಡೆ, ಗಿರಿಜೇಶ್‌, ಮಮತಾ, ಸೌಮ್ಯ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular