ಬೆಂಗಳೂರು : ಮುಂದಿನ ತಿಂಗಳಿಂದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ನೀಡುವ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ₹ 150 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರೋಗ್ಯ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಕ್ರಮವಹಿಸಲಾಗಿದೆ. ಕಿಮೋ ಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗಳಿಗೆ ತೆರಳುವುದನ್ನು ತಪ್ಪಿಸಲು ಮುಂದಿನ ತಿಂಗಳಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.
ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುತ್ತದೆ. ಈ ಸಂಬಂಧ ರಾಜ್ಯದಲ್ಲಿ 60-70 ಹಾಟ್‌ಸ್ಪಾಟ್ (ಅಪಘಾತ ವಲಯ) ಗುರುತಿಸಲಾಗಿದೆ. ಇಲ್ಲಿಗೆ ಹತ್ತಿರದಲ್ಲಿಯೇ ಟ್ರಾಮಾ ಸೌಲಭ್ಯವನ್ನೂ ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಇನ್ನು, ಹೊರಗಡೆಯಿಂದ ಔಷಧ ಬರೆದುಕೊಡುವ ಪರಿಪಾಠ ತಪ್ಪಿಸಿ, ಸರ್ಕಾರಿ ಆಸ್ಪತ್ರೆಗಳಲ್ಲೇ ಎಲ್ಲ ಬಗೆಯ ಔಷಧವನ್ನು ಪೂರೈಸಲು ಕ್ರಮ ವಹಿಸುತ್ತೇವೆ ಎಂದರು.