Saturday, April 19, 2025
Google search engine

Homeರಾಜ್ಯಮೈಸೂರಿನಲ್ಲಿ ಚಿತ್ರ ನಗರಿ: ಕಾಮಗಾರಿ ಆರಂಭಕ್ಕೆ ಸಿಎಂ ಸೂಚನೆ

ಮೈಸೂರಿನಲ್ಲಿ ಚಿತ್ರ ನಗರಿ: ಕಾಮಗಾರಿ ಆರಂಭಕ್ಕೆ ಸಿಎಂ ಸೂಚನೆ

ಬೆಂಗಳೂರು: ಮೈಸೂರಿನಲ್ಲಿ ಚಿತ್ರನಗರಿಯ ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು ಹಾಗೂ ಎರಡನೇ ಹಂತಕ್ಕೆ ೫೦ ಎಕರೆ ಭೂಮಿ ಗುರುತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಗುರುತಿಸಿರುವ ೧೧೦ ಎಕರೆ ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರಿಸಲು ಆದೇಶಿಸಿದರು. ಚಿತ್ರನಗರಿ ಯೋಜನೆಯನ್ನು ೨೦೧೫-೧೬ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿತ್ತು. ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಭೂಮಿ ಹಸ್ತಾಂತರವಾದ ಕೂಡಲೇ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಟೆಂಡರ್ ಕರೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಥಿಯೇಟರ್, ಸ್ಟುಡಿಯೊ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‌ಗಳೂ ಸೇರಿದಂತೆ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನು ಒಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು. ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸುವಂತೆ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೂ ಒತ್ತು ನೀಡಬೇಕು ಎಂದು ಸೂಚಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular