ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ನಿಖಿಲ್, ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು ಎಂದು ಹೇಳಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೇ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಎಚ್ಚರಿಸಿದ್ದಾರೆ.