Saturday, May 24, 2025
Google search engine

Homeಸ್ಥಳೀಯಮೈಸೂರಿನಲ್ಲಿ ಕಿಮೋಥೆರಪಿ ಆರೈಕೆ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರಿನಲ್ಲಿ ಕಿಮೋಥೆರಪಿ ಆರೈಕೆ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಹೆಚ್ಚು ಅನುಭವ ಹಾಗೂ ಹೆಚ್ಚು ಪರಿಣಿತಿ ಇರುವ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಇದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆ ಎಂದು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.


ಇಂದು ಮೇಟಗಳ್ಳಿ ಜಿಲ್ಲಾ ಆಸ್ಪತ್ರೆಯಲ್ಲಿ ಕಿಮೋಥೆರಪಿ ಆರೈಕೆ ಕೇಂದ್ರಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕದ ೧೬ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಮೈಸೂರಿನಲ್ಲಿ ೨೦ ಬೆಡ್ ಗಳ ಹಾಗೂ ಇತರೆಡೆ ೧೦ ಬೆಡ್ ಗಳ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳನ್ನು ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಹಲವು ಜನ ಕ್ಯಾನ್ಸರ್ ಚಿಕಿತ್ಸೆಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕಿತ್ತು. ಇದನ್ನು ತಪ್ಪಿಸಲು ಕಿಮೋಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ ೭೦ ಸಾವಿರ ಜನ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇವರೆಲ್ಲಾ ಚಿಕಿತ್ಸೆ ಪಡೆಯಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಬೇಕಿತ್ತು. ಇವರಿಗೆ ಹತ್ತಿರದಲ್ಲಿ ಚಿಕಿತ್ಸೆ ನೀಡಲು ೧೬ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ. ಕಿಮೊಥೆರಪಿ ಚಿಕಿತ್ಸೆ ಪಡೆದು ೧೦, ೧೫, ವರ್ಷ ಬದುಕಿದ್ದಾರೆ. ಕ್ಯಾನ್ಸರ್ ಬಂದರೆ ಯಾರು ದೃತಿಗೆಡಬಾರದು. ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಬಾರಿ ಆದರೂ ದೇಹವನ್ನು ಪೂರ್ಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ನಾನು ೨೦೧೩ ರಲ್ಲಿ ಅಧಿಕಾರಕ್ಕೆ ಬಂದಾಗ ಉಚಿತವಾಗಿ ೫ ಕೆ ಜಿ ಅಕ್ಕಿಯನ್ನು ಉಚಿತವಾಗಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗಿತ್ತು ಇದರ ಉದ್ದೇಶ ಯಾರು ಹಸಿವಿನಿಂದ ಮಲಗಬಾರದು. ೨೦೨೩ ರಲ್ಲಿ ಅಧಿಕಾರಕ್ಕೆ ಬಂದಾಗ ಅದನ್ನು ೧೦ ಕೆ ಜಿ ಗೆ ಹೆಚ್ಚಳ ಮಾಡಲಾಗಿದೆ. ಎಲ್ಲರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಸಮಾನವಾಗಿ ವೈದ್ಯಕೀಯ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ದೊರೆಯಬೇಕು. ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕು. ಹಿಂದೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ, ಜಯದೇವ ಆಸ್ಪತ್ರೆ ಇರಲಿಲ್ಲ. ನಾನು ಅಧಿಕಾರಕ್ಕೆ ಬಂದ ನಂತರ ಇವುಗಳನ್ನು ಮೈಸೂರಿನಲ್ಲಿ ಪ್ರಾರಂಭ ಮಾಡಿದೆನು. ಮೈಸೂರು ಜಿಲ್ಲಾ ಆಸ್ಪತ್ರೆಗೆ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದ ೨೪೦ ಕೇಂದ್ರಗಳಲ್ಲಿ ಡಯಾಲಿಸಿಸ್ಚಿಕಿತ್ಸೆಯನ್ನುಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.


ನಾನು ನೀಡಿರುವ ೫ ಗ್ಯಾರೆಂಟಿ ಯೋಜನೆಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿವೆ. ಯಾವುದೇ ಜಾತಿ ಧರ್ಮದ ಆಧಾರದ ಮೇಲೆ ಗ್ಯಾರೆಂಟಿ ಯೋಜನೆಗಳನ್ನು ನೀಡುತ್ತಿಲ್ಲ. ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ೧.೨೨ ಕೋಟಿ ಕುಟುಂಬದ ಮಹಿಳೆಯರಿದೆ ೨೦೦೦ ರೂ ಗಳನ್ನು ಹಾಗೂ ೧.೬೩ ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಅನೇಕ ಬಡಜನರು ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಪರದಾಡುತ್ತಾರೆ. ಅವರಿಗೆ ಚಿಕಿತ್ಸೆ ಕೊಡಿಸಲು ಹಣ ಇರುವುದಿಲ್ಲ. ಆದ್ದರಿಂದ ಕ್ಯಾನ್ಸರ್ ಚಿಕಿತ್ಸೆ ಕಿದ್ವಾಯಿ ಆಸ್ಪತ್ರೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು. ಕ್ಯಾನ್ಸರ್ ರೋಗವು ನಾವು ಬಳಸುವ ಆಹಾರ, ನಮ್ಮ ಜೀವನ ಶೈಲಿಯಿಂದ ಬರುತ್ತದೆ. ಬಡವರು ಕ್ಯಾನ್ಸರ್ ಚಿಕಿತ್ಸೆಗೆ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುವುದು ಬಹಳ ಕಷ್ಟ ಆಗುತ್ತಿತ್ತು. ಇದನ್ನು ಮನಗಂಡು ೧೬ ಜಿಲ್ಲಾ ಆಸ್ಪತ್ರೆಗಳಲ್ಲಿ ೧೦ ಬೆಡ್‌ನಕಿಮೋಥೆರಪಿ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ, ಮೈಸೂರು ನಗರದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಿದ ಕೀರ್ತಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ನಿಮಾನ್ಸ್ ಆಸ್ಪತ್ರೆ ಒಂದು ಮೈಸೂರಿಗೆ ಬಂದರೆ ಎಲ್ಲಾ ರೀತಿಯ ಆರೋಗ್ಯ ಸೇವೆ ದೊರೆತಂತೆ ಆಗುತ್ತದೆ. ಮಹಾರಾಣಿ ಹಾಸ್ಟೆಲ್ ನಲ್ಲಿ ಈ ಹಿಂದೆ ೩೦೦ ವಿದ್ಯಾರ್ಥಿನಿಯರಿಗೆ ಅವಕಾಶ ಇತ್ತು. ಈಗ ೨೯೦೦ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ನಗರಕ್ಕೆ ಕಿದ್ವಾಯಿ ಆಸ್ಪತ್ರೆ ಮುಂದಿನದಿನಗಳಲ್ಲಿ ಬರುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ನವೀನ್ ಭಟ್ ಅವರು ಮಾತನಾಡಿ, ಇಂದು ನಾವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ನ್ನು ಸ್ಥಾಪಿಸುತ್ತಿದ್ದೇವೆ. ಕ್ಯಾನ್ಸರ್ ರೋಗಿಗಳು ಕ್ಯಾನ್ಸರ್ ಆಸ್ಪತ್ರೆಗಳಿಗೆ ಬರಲು ನೂರಾರು ಕಿಲೋಮೀಟರ್ ಗಳಿಂದ ಬಂದು ಚಿಕಿತ್ಸೆ ಪಡೆಯಬೇಕು. ಆದ್ದರಿಂದ ಕಿದ್ವಾಯಿಸಹಯೋಗದೊಂದಿಗೆ ಹಬ್ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ನ ಸದಸ್ಯರಾದ ಡಿ. ತಿಮ್ಮಯ್ಯ, ಡಾ. ಯತಿಂದ್ರ ಸಿದ್ದರಾಮಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular