ಚಿತ್ರದುರ್ಗ: ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ವತಿಯಿಂದ ಕಂಪನಿ ವಿಶ್ಲೇಷಣೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಟಿ ತಿಪ್ಪೇರುದ್ರಸ್ವಾಮಿ, ಪೈಪೋಟಿಯುಕ್ತ ಆಧುನಿಕ ಜಗತ್ತಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು. ಕಾಲೇಜಿಗೆ ಮತ್ತು ಪೋಷಕರಿಗೆ ಕೀರ್ತಿ ತರುವುದರ ಜೊತೆಗೆ ಯಶಸ್ವಿಯತ್ತ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಘದ ಕಾರ್ಯದರ್ಶಿ ಪ್ರೊ. ಎಲ್. ನಾಗರಾಜಪ್ಪ ಮಾತನಾಡಿ ವಿದ್ಯಾರ್ಥಿಗಳು ಕಾರ್ಯಗಾರದ ಪ್ರಯೋಜನವನ್ನು ಪಡೆದುಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ತಿಳಿಸಿದರು. ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಕೆ.ಎಸ್.ಸೌಮ್ಯ ಕಂಪನಿ ವಿಶ್ಲೇಷಣಿ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಪ್ರೊ.ಜಿ.ಡಿ ಸುರೇಶ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಎಲ್.ಶ್ರೀನಿವಾಸ, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಪಿ.ಎಸ್. ಮೇಘನಾ, ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮುಯೆಲ್ ಡಬ್ಲೂ ಸೇರಿದಂತೆ ಅತಿಥಿ ಉಪನ್ಯಾಸಕರು, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.