ಚಾಮರಾಜನಗರ: ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜನವರಿ 20 ಹಾಗೂ 21 ರಂದು ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ, ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಯಲೆಂಬ ಸದುದ್ದೇಶದಿಂದ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ನಗರದ ಜೆ.ಎಸ್.ಎಸ್. ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ಪ್ರೌಢಶಾಲಾ ವಿಭಾಗ, ಸೇವಾಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು, ಎಂ.ಸಿ.ಎಸ್. ಪಬ್ಲಿಕ್ ಶಾಲೆ, ಸೆಂಟ್ ಜೋಸೆಫ್ ಪ್ರೌಢಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯೂನಿವರ್ಸಲ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಸೇವಾಭಾರತಿ ಆಂಗ್ಲ ಮಾಧ್ಯಮ ಶಾಲೆ, ಜೆ.ಎಸ್.ಎಸ್. ಬಾಲಕರ ಪ್ರೌಢಶಾಲೆ, ಸೆಂಟ್ ಪೌಲ್ಸ್ ಪ್ರೌಢಶಾಲೆ, ಜೆ.ಎಸ್.ಎಸ್. ಬಾಲಕಿಯರ ಪ್ರೌಢಶಾಲೆ, ಶ್ರೀ ರಾಮಚಂದ್ರ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರನ್ವಯ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ. ನಿಷೇಧಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.