ಚಾಮರಾಜನಗರ: ಲೋಕಸಭೆ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದ್ದು, ಮತ ಎಣಿಕೆಯನ್ನು ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ನಡೆಸುವಂತೆ 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ನಗರದ ಜೆ. ಪಟೇಲ್ ಸಭಾಂಗಣದಲ್ಲಿ ಇಂದು ಮತ ಎಣಿಕೆ ಹಿನ್ನೆಲೆಯಲ್ಲಿ ಸೂಕ್ಷ್ಮ ವೀಕ್ಷಕರು ಹಾಗೂ ಮತ ಎಣಿಕೆ ಅಧಿಕಾರಿಗಳಿಗೆ ಆಯೋಜಿಸಿದ್ದ ಚುನಾವಣಾ ಮತ ಎಣಿಕೆ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಹೆಚ್. ನಂಜನಗೂಡು ರಸ್ತೆಯಲ್ಲಿರುವ ಬೇಡರಾಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಿದ ಗುರುತಿನ ಚೀಟಿಯೊಂದಿಗೆ ಸಕಾಲಕ್ಕೆ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು. ಮತ ಎಣಿಕೆ ಕೇಂದ್ರಕ್ಕೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೆÇೀನ್ ಮತ್ತು ಸ್ಮಾರ್ಟ್ ವಾಚ್ ಗಳನ್ನು ತರಲಾಗುತ್ತಿಲ್ಲ. ಮತ ಎಣಿಕೆ ಕೇಂದ್ರದ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಮಾಸ್ಟರ್ ಟ್ರೇನರ್ ಗಳು, ಮತ ಎಣಿಕೆ ಅಧಿಕಾರಿ, ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ಎಣಿಕೆ ಕಾರ್ಯ ನಿರ್ವಹಿಸಬೇಕು.
ಮತ ಎಣಿಕೆ ಗೊಂದಲಕ್ಕೆ ಅವಕಾಶವಾಗದಂತೆ ಸರಿಯಾಗಿ ನಡೆಯಲು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಮಾಹಿತಿ ನೀಡಿದರು. ತರಬೇತಿ ನೋಡಲ್ ಅಧಿಕಾರಿ ಲಿಂಗರಾಜೇ ಅರಸ್ ಅವರು ಪವರ್ ಪಾಯಿಂಟ್ ಮೂಲಕ ಮತ ಎಣಿಕೆ ಚಟುವಟಿಕೆಗಳನ್ನು ವಿವರಿಸಿದರು. ವಿದ್ಯುನ್ಮಾನ ಮತಯಂತ್ರದ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭ. ಮತ ಎಣಿಕೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿಯಲ್ಲಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಪಡೆದು ಕರ್ತವ್ಯ ನಿರ್ವಹಿಸಬೇಕು.
ಚುನಾವಣೆಯಲ್ಲಿ ಮತದಾನ ಮತ್ತು ಮತ ಎಣಿಕೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಯಾವುದೇ ತಪ್ಪುಗಳಿಗೆ ಆಸ್ಪದ ನೀಡದಂತೆ ಮತ ಎಣಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಕಾರ್ಯಾಗಾರದಲ್ಲಿ ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು ಹಾಗೂ ಸಂಪನ್ಮೂಲ ವ್ಯಕ್ತಿ ಸವೀನಾ, ಮಾಸ್ಟರ್ ಟ್ರೈನರ್‌ಗಳು, ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.