ಮೈಸೂರು: ರಾಜ್ಯದಲ್ಲಿ ಜಾರಿಗೆ ಬಂದಿರುವ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
“ಇತ್ತೀಚೆಗೆ ಪ್ರಧಾನಿ ಮೋದಿಯಿಂದ ಹಿಡಿದು ಬಿಜೆಪಿ ನಾಯಕರು ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ದರು. ಆದರೆ ಈಗ ಅವರೇ ಈ ಯೋಜನೆಗಳನ್ನು ಅನುಸರಿಸುತ್ತಿದ್ದಾರೆ,” ಎಂದು ಡಿಕೆಶಿ ಹೇಳಿದರು. ಹರಿಯಾಣ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಹಲವು ರಾಜ್ಯಗಳು ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿವೆ ಎಂದರು.
ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿ ಆಗುತ್ತೆ ಎಂದು ಆರೋಪಿಸಿದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೆ ತರಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ವಿವರಿಸಿದರು. ಮೈಸೂರಿನಲ್ಲಿ 2,600 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ನೀಡಿರುವುದನ್ನು ಅವರು ಉಲ್ಲೇಖಿಸಿದರು.
ರಾಹುಲ್ ಗಾಂಧಿ ಅವರ ಪಾದಯಾತ್ರೆ ಹಾಗೂ ಖರ್ಗೆ ಅವರ ನೇತೃತ್ವದಿಂದ ಕಾಂಗ್ರೆಸ್ ಉತ್ತಮ ಸಾಧನೆ ಮಾಡುತ್ತಿದೆ ಎಂದು ಅವರು ನುಡಿದರು.