ಬೆಂಗಳೂರು; ಕರ್ನಾಟಕದಲ್ಲಿ ಸದ್ಯ ಹೆಚ್ಚು ಪ್ರಚಾರದಲ್ಲಿರುವ ಹೆಸರು ರಣದೀಪ್ ಸಿಂಗ್ ಸುರ್ಜೇವಾಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧಿಕಾರಿಗಳ ಸಭೆ ನಡೆಸುವಾಗ ರಣದೀಪ್ ಸಿಂಗ್ ಸುರ್ಜೇವಾಲ ಅದರಲ್ಲಿ ಪಾಲ್ಗೊಂಡಿದ್ದರು ಎಂಬುದು ಆರೋಪ. ಸದ್ಯ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಪಕ್ಷ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಅವರು ಪಾಲ್ಗೊಂಡಿದ್ದಾರೆ ಎಂಬ ಚಿತ್ರಗಳು ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿವೆ. ಪ್ರತಿಪಕ್ಷ ಬಿಜೆಪಿ ಈ ಚಿತ್ರವನ್ನು ಮುಂದಿಟ್ಟುಕೊಂಡು ಸರ್ಕಾರ, ಕಾಂಗ್ರೆಸ್ ಪಕ್ಷದ ವಿರುದ್ಧ ಸರಣಿ ಟ್ವೀಟ್ ಮಾಡುತ್ತಿದೆ.
ಡಿ. ಕೆ. ಶಿವಕುಮಾರ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವಾರು ನಾಯಕರು ರಣದೀಪ್ ಸಿಂಗ್ ಸುರ್ಜೇವಾಲ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಪ್ರತಿಪಕ್ಷದ ವಿವಿಧ ನಾಯಕರು ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ದ ಟೀಕೆ ಮಾಡುತ್ತಿದ್ದಾರೆ. ಮಾಜಿ ಸಚಿವ, ಕಾರ್ಕಳದ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಬುಧವಾರ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಕುರಿತು ಉಲ್ಲೇಖ ಮಾಡಿದ್ದಾರೆ.
‘ಕಾಂಗ್ರೆಸ್ ಸರ್ಕಾರ ಅಂಬೆಗಾಲಿಡುತ್ತಿರುವಾಗಲೇ ಹೈಕಮಾಂಡ್‌ನ ಸಂವಿಧಾನ ಬಾಹಿರ ಹಸ್ತಕ್ಷೇಪ ಪ್ರಾರಂಭವಾಗಿದೆ. ಬಿಬಿಎಂಪಿ ಅಧಿಕಾರಿಗಳು ಹಾಗೂ ಉಪಮುಖ್ಯಮಂತ್ರಿ @DKShivakumar ಜತೆ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ @rssurjewala ಗೌಪ್ಯ ಸಭೆ ನಡೆಸಿದ್ದರ ಮರ್ಮವೇನು?
ಹೈಕಮಾಂಡ್‌ನ ಎಟಿಎಂ ಶಾಖೆಯನ್ನು ಬೆಂಗಳೂರಿನಲ್ಲಿ ತೆರೆಯುವ ಉದ್ದೇಶವೇ?’ ಎಂದು ಕೇಳಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲು ಪ್ರತಿಪಕ್ಷ ಬಿಜೆಪಿ ತೀರ್ಮಾನ ಮಾಡಿದೆ. ಮಾಜಿ ಸಚಿವ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲಿದೆ.
ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ
ರಣದೀಪ್ ಸಿಂಗ್ ಸುರ್ಜೇವಾಲ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಬಗ್ಗೆ ತುಮಕೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಮಾತನಾಡಿದ ಅವರು, “ಯಾರು, ಯಾರಿಗೆ ಬೇಕಾದರೂ ದೂರು ನೀಡಲಿ. ನಾನು ಸಿಟಿ ರೌಂಡ್ನಲ್ಲಿ ಇದ್ದೆ. ನನ್ನನ್ನು ಕರೆದುಕೊಂಡು ಹೋಗಲು ಅವರು ಬಂದಿದ್ದರು. ಬಿಬಿಪಿಎಂ ಸಭೆಗೂ ರಣದೀಪ್ ಸಿಂಗ್ ಸುರ್ಜೇವಾಲಗೂ ಸಂಬಂಧವಿಲ್ಲ. ನಾನು ಯಾವುದೇ ಸಭೆ ನಡೆಸಿಲ್ಲ. ಯಾರಿಗೆ ಬೇಕಾದರೂ ದೂರು ನೀಡಲಿ” ಎಂದು ಹೇಳಿದರು.
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ. “ನಿನ್ನೆ ಕಾಫಿ ಕುಡಿದು ಹೋದೆವು ಅಷ್ಟೇ, ಯಾವುದೇ ಚರ್ಚೆ ಆಗಿಲ್ಲ. ಸಭೆ ಬಗ್ಗೆ ಯಾವುದೇ ಪೂರ್ವ ನಿಯೋಜನೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದರು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ‘ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?. ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ. ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?’ ಎಂದು ಕೇಳಿದ್ದರು.