ಮಡಿಕೇರಿ :ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದು ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ ಸೋಮವಾರ ಮಡಿಕೇರಿಯಲ್ಲಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ,
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕ ಮತ್ತು ಎನ್.ಸಿ.ಸಿ.,ಘಟಕ ಹಾಗೂ ನಗರದ ಗ್ರೀನ್ ಸಿಟಿ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಅರಣ್ಯ ಭವನದ ಆವರಣದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69 ನೇ ವನ್ಯಜೀವಿ ಸಪ್ತಾಹದ ಜಾಗೃತಿ ಜಾಥಾ ಹಾಗೂ ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರುವ ಕೊಡಗಿನ ಜನತೆಯ ಪರಿಸರ ಪ್ರೇಮ ಮಾದರಿಯಾದುದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಈ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದು ತ್ರಿಪಾಠಿ ಹೇಳಿದರು.
ವನ್ಯಜೀವಿ ಸಪ್ತಾಹ ಕುರಿತಾದ ಕರಪತ್ರ ಬಿಡುಗಡೆಗೊಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆಯವರು ಹೆಚ್ಚಿನ ಜವಾಬ್ದಾರಿಯಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾದುದು. ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು. ವನ್ಯಜೀವಿ ವಿಭಾಗದ ಡಿಸಿಎಫ್ ಎಂ.ಶಿವರಾಮ್ ಬಾಬು ಮಾತನಾಡಿ, ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಹಾಗೂ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
