ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಮಧ್ಯ ಕರ್ನಾಟಕ ಭಾಗದ ರೈತರ ಆಶಾಕಿರಣವಾಗಿ, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ತಳಿ ಸಂವರ್ಧನೆ, ಬೇಸಾಯ ಕ್ರಮ ಹಾಗೂ ಕೃಷಿ ತಾಂತ್ರಿಕತೆ ಅಭಿವೃದ್ಧಿಯಲ್ಲಿ ಸಂಶೋಧನೆ ಕೈಗೊಂಡು ನಾಡಿಗೆ ಕೊಡುಗೆ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ. 06 ರಂದು ಬಬ್ಬೂರು ಫಾರಂ ಗೆ ಆಗಮಿಸಿ, ಶತಮಾನೋತ್ಸವ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
1916ರಲ್ಲಿ ಸ್ಥಾಪನೆಯಾದ ಈ ಸಂಶೋಧನಾ ಕೇಂದ್ರವು 2016 ರಲ್ಲಿ ಶತಮಾನೋತ್ಸವ ಪೂರೈಸಿದೆ. ಬಬ್ಬೂರು ಫಾರಂನಲ್ಲಿ ಶತಮಾನೋತ್ಸವ ನೆನಪಿಗಾಗಿ ನಿರ್ಮಿಸಲಾಗಿರುವ ಶತಮಾನ ಭವನ ಲೋಕಾರ್ಪಣೆ ಮಾಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಸಿರಿಧಾನ್ಯ ಮೇಳ ಮತ್ತು ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣಕ್ಕೂ ಚಾಲನೆ ನೀಡುವರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಕೃಷಿ ಸಂಶೋಧನಾ ಕೇಂದ್ರದಿಂದ ಹೊರತರಲಾಗಿರುವ ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಸ್ಮರಣ ಸಂಚಿಕೆ ಹಾಗೂ ಭೂ ವಿಜ್ಞಾನ, ಗಣಿಗಾರಿಕೆ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡುವರು. ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ರಾಜ್ಯದ ವಿವಿಧ ಕೃಷಿ ಹಾಗೂ ತೋಟಗಾರಿಕೆ ವಿಶ್ವ ವಿದ್ಯಾಲಯಗಳ ಕುಲಪತಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು, ಸಂಶೋಧನಾ ಕೇಂದ್ರದ ವ್ಯವಸ್ಥಾಪನ ಮಂಡಳಿ ಸದಸ್ಯರು, ಸಂಶೋಧನಾ ಕೇಂದ್ರ ಅಧಿಕಾಗಳು ಹಾಗೂ ಕೃಷಿಕ ಸಮಾಜ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಗತಿಪರ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.