ಮದ್ದೂರು: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಡೆಂಘೀ ಜ್ವರ ನಿಯಂತ್ರಣಕ್ಕೆ ಅರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ತಾಲೂಕಿನಲ್ಲಿ ಡೆಂಘೀ ಜ್ವರ ನಿಯಂತ್ರಣದಲ್ಲಿದ್ದು ಸಾರ್ವಜನಿಕರು ಯಾವುದೇ ಆತಂಕ ಪಡುವ ಆತಂಕವಿಲ್ಲ. ಆದರೆ, ಈ ಬಗ್ಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಡೆಂಘೀ ಜ್ವರ ಬಾರದಂತೆ ಸ್ವಚ್ಚತೆ ಕಾಪಾಡುವುದು, ಹಳ್ಳ, ಚರಂಡಿ, ಮನೆಯ ಸುತ್ತ ಮುತ್ತ ನೀರು ನಿಂತುಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಾಲಾ, ಕಾಲೇಜು, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕರ ಪತ್ರಗಳನ್ನ ಹಂಚುವ ಮೂಲಕ ಜ್ವರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪಟ್ಟಣದ ಕೆ.ಗುರುಶಾಂತಪ್ಪ ಸಕರ್ಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡುವ 3 ಮಿಷಿನ್ಗಳು ಮಾತ್ರ ಇದ್ದು ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಕೆಲವರು ಮಂಡ್ಯಕ್ಕೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ 3 ಇರುವ ಮಿಷಿನ್ ಅನ್ನು 5 ಮಾಡಲು ಅಗತ್ಯ ಕ್ರಮ ಕೈಗೊಂಡು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ ಮಾತನಾಡಿ, ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 77 ಡೆಂಘೀ ಜ್ವರ ಪ್ರಕರಣ ಕಂಡು ಬಂದಿದ್ದು, ಇದರಲ್ಲಿ 75 ಜನರು ಗುಣಮುಖರಾಗಿದ್ದು, ಇಬ್ಬರು ಮಾತ್ರ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರಗೆ ಯಾವುದೇ ಸಾವು ಸಂಭವಿಸಿಲ್ಲ. ತಾಲೂಕಿನಲ್ಲಿ ಡೆಂಘೀ ಜ್ವರ ನಿಯಂತ್ರಣದಲ್ಲಿದ್ದು, ಆರೋಗ್ಯ ಇಲಾಖೆಯ ವತಿಯಿಂದ ಎಲ್ಲಾ ರೀತಿಯ ಮುಂಜಾಗ್ರಾತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಾಪಂ ಇಒ ಸಂದೀಪ್, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಗುರುಶಾಂತಪ್ಪ ಸಕರ್ಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ಅಧಿಕಾರಿಗಳಾದ ಡಾ.ಕಾಂತರಾಜು, ಡಾ.ಬೆಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.