ಮಂಡ್ಯ: ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಮಂಡ್ಯದಲ್ಲಿ ಅತ್ಯಾಚಾರ ವಿರೋಧಿ ಆಂದೋಲನ ಹಾಗೂ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸೌಜನ್ಯಳ ಪ್ರಕರಣ ಮರು ತನಿಖೆಗೆ ವಹಿಸಬೇಕು ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಲಾಯಿತು.
ಪೊಲೀಸ್ ಇಲಾಖೆಯಿಂದ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಹತ್ಯೆಗೆ ನ್ಯಾಯ ಸಿಕ್ಕಿಲ್ಲ. ನೊಂದ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಮೆರವಣಿಗೆ ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಮುನ್ನಡೆ ಸೇರಿ ಪ್ರಗತಿಪರ ಸಂಘಟನೆಗಳು ಭಾಗಿಯಾಗಿದ್ದವು.