Monday, April 21, 2025
Google search engine

Homeರಾಜ್ಯಸುದ್ದಿಜಾಲಕೋವಿಡ್ : ಅಗತ್ಯ ಮುಂಜಾಗ್ರತಾ ಕ್ರಮಗಳ ಪಾಲನೆಗೆ ಜಿಲ್ಲಾಡಳಿತ ಸಲಹೆ

ಕೋವಿಡ್ : ಅಗತ್ಯ ಮುಂಜಾಗ್ರತಾ ಕ್ರಮಗಳ ಪಾಲನೆಗೆ ಜಿಲ್ಲಾಡಳಿತ ಸಲಹೆ

ಚಾಮರಾಜನಗರ: ಕೇರಳ ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-೧೯ನ ಉಪತಳಿ ಜೆ.ಎನ್-೧ ವರದಿಯಾಗಿದ್ದು, ಚಳಿಗಾಲದ ಹವಾಮಾನ, ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್-೧೯ ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ವಿವಿಧ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

ಎಲ್ಲಾ ಹಿರಿಯ ನಾಗರಿಕರು (೬೦ ವರ್ಷ ಹಾಗೂ ಮೇಲ್ಪಟ್ಟವರು) ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್, ಸಮಸ್ಯೆಗಳು) ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಮತ್ತು ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

ಉತ್ತಮ ವೈಯಕ್ತಿಕ ಸ್ವಚ್ಚತೆ ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು, ಆರೋಗ್ಯ ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡಬೇಕು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ. ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಐ.ಎಲ್.ಐ (ಶೀತ ಜ್ವರ ಮಾದರಿ ಅನಾರೋಗ್ಯ) ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಐ.ಹೆಚ್.ಐ.ಪಿ. ನಮೂನೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳಿಂದ ಪ್ರತಿದಿನ ಕಡ್ಡಾಯವಾಗಿ ನಮೂದಿಸಲಾಗುತ್ತಿದೆ.

ಪ್ರತಿ ೨೦ ಐಎಲ್‌ಐ ಪ್ರಕರಣಗಳಲ್ಲಿ ೦೧ ಪ್ರಕರಣವನ್ನು ಹಾಗೂ ಎಲ್ಲಾ ಸಾರಿ ಪ್ರಕರಣಗಳನ್ನು ಕೋವಿಡ್-೧೯ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸಲಾಗುತ್ತಿದೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಭೌತಿಕ ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ತೊಳೆದುಕೊಳ್ಳುವುದು, ಮುಂತಾದವುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ೬೦ ವರ್ಷ ಮೇಲ್ಪಟ್ಟವರು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬೇರೆ ಜಿಲ್ಲೆಗೆ ಹೋಗಿಬರುವವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಗಡಿಭಾಗದಲ್ಲಿ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಜ್ವರ ಸಮೀಕ್ಷೆ ನಡೆಸಲಾಗುತ್ತಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಚೆಕ್‌ಪೋಸ್ಟ್ ನಲ್ಲಿ ಪ್ರಯಾಣಿಕರಿಗೆ ತಪಾಸಣೆ ನಡೆಸಲಾಗುತ್ತಿದೆ ಹಾಗೂ ಸಂಶಯಾಸ್ಪದ ಐಎಲ್‌ಐ, ಸಾರಿ ಪ್ರಕರಣಗಳಿಗೆ ಗಂಟಲು ದ್ರವ್ಯ ಮಾದರಿಗಳನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯಲ್ಲಿ (ಸಿಮ್ಸ್), ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಸಂಬಂಧಪಟ್ಟಂತೆ ಐಸೊಲೇಶನ್ ಹಾಸಿಗೆ, ಆಮ್ಲಜನಕ ಸರಬರಾಜು ಮತ್ತು ವೆಂಟಿಲೇಟರ್ ಗಳನ್ನು ಸನ್ನದ್ಧವಾಗಿ ಇರಿಸಲಾಗಿದೆ. ಕೋವಿಡ್-೧೯ ಪ್ರಕರಣಗಳಿಗೆ ಬೇಕಾದ ಅಗತ್ಯ ಔಷಧಗಳ ದಾಸ್ತಾನು ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular