ಬೆಂಗಳೂರು: ಮೋಡ ಬಿತ್ತನೆ ಮಾಡಲು ಮುಂದಿನ ಎರಡು-ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾತನಾಡಿದ ಅವರು, ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ. ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ ಎಂದರು.
ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ. ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಹೋರಾಟಗಳಿಂದ ಕಾನೂನಾತ್ಮಕ ತೊಂದರೆ ಆಗುವುದಿಲ್ಲವೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಂತ್ರಿಯಾಗಿ ಇದಕ್ಕೆ ಉತ್ತರ ನೀಡಲು ಆಗುವುದಿಲ್ಲ. ನ್ಯಾಯಾಲಯಕ್ಕೆ ಹಾಗೂ ಜನ ಇಬ್ಬರಿಗೂ ಗೌರವ ಕೊಡಬೇಕು. ಜನ ಸಹಕಾರ ಕೊಡದೇ ಇದ್ದರೆ ‘ಬಂದ್’ ಎನ್ನುವ ಹೋರಾಟಕ್ಕೆ ಮರ್ಯಾದೆ ಇರುವುದಿಲ್ಲ ಎಂದು ತಿಳಿಸಿದರು.