ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ತಮ್ಮ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸುವಂತೆ ಕೋರಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ವಜಾ ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ವಾದ-ಪ್ರತಿವಾದದ ಬಳಿಕ ಉಭಯ ಕಡೆಯ ವಕೀಲರ ಕೋರಿಕೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡವರ ರೀತಿಯಲ್ಲಿ ಐಪಿಎಸ್ ಅಧಿಕಾರಿ ರೂಪಾ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ರೋಹಿಣಿ ಸಿಂಧೂರಿ, ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿದ್ದಾರೆ.