ನವದೆಹಲಿ: ನವದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಅನುಭವಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ, ದೆಹಲಿಯ ಮುಖ್ಯಮಂತ್ರಿಯಾಗಿರುವ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಅತಿಶಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈ ಕ್ಷೇತ್ರದ ಕಡೆಗೆ ಬಿಜೆಪಿ ಹೈಕಮಾಂಡ್ ಹೆಚ್ಚು ಗಮನ ಹರಿಸಿತ್ತು. ಕಲ್ಕಾಜಿ 2025ರ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಪೈಪೋಟಿಯಿಂದ ಕೂಡಿದ್ದ ಮತ್ತು ಕುತೂಹಲ ಕೆರಳಿಸಿದ್ದ ಸ್ಥಾನಗಳಲ್ಲಿ ಒಂದಾಗಿತ್ತು. 1993ರ ಬಳಿಕ ಕಲ್ಕಾಜಿ ಕ್ಷೇತ್ರದಲ್ಲಿ ಒಮ್ಮೆಯೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದರು. ಬಳಿಕ 2024ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಅವರು ಅಚ್ಚರಿಯ ನಿರ್ಧಾರ ತೆಗೆದುಕೊಂಡು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ 2024ರ ಸೆಪ್ಟೆಂಬರ್ 21ರಂದು ಅತಿಶಿ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರು ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಬಳಿಕ ದೆಹಲಿಯ 3ನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಈ ವಿಧಾನಸಭಾ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಪ್ರಮಾಣವಚನ ಸ್ವೀಕಾರದ ಸಂದರ್ಭದಲ್ಲೇ ಅತಿಶಿ ಘೋಷಿಸಿದ್ದರು. ಹೀಗಾಗಿ, ಆಮ್ ಆದ್ಮಿ ಪಕ್ಷದಿಂದ ಅರವಿಂದ್ ಕೇಜ್ರಿವಾಲ್ ಅವರೇ ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು.
ದೆಹಲಿಯ ಪ್ರಸ್ತುತ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಸಿಂಗ್ 3,500 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಗೆಲುವು ಸಾಧಿಸಿದ್ದಾರೆ.