ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿಯ ಶಾಸಕ ಮುನಿರತ್ನ ಮತ್ತು ಆಪ್ತ ವಸಂತ್ ಕುಮಾರ್ ಘನತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಸಂಬಂಧ ಗುತ್ತಿಗೆದಾರರೊಬ್ಬರಿಂದ ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಇದಕ್ಕಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಆಡಿಯೋ ಬಹಿರಂಗಗೊಂಡಿದ್ದು ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.