ಮಂಗಳೂರು (ದಕ್ಷಿಣ ಕನ್ನಡ): ಜಮೀನಿನ ಪೌತಿ ಖಾತೆ ಮಾಡಿಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಜೊತೆ ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ದೂರಿನಂತೆ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.ಬಂಟ್ವಾಳ ತಾಲೂಕು ಕಚೇರಿಯ ಕಂದಾಯ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್ ಹಾಗೂ ಬ್ರೋಕರ್ ಗಣೇಶ್ ವಾಮದಪದವು ಎಂಬವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.
ಸಜಿಪಮುನ್ನೂರು ಗ್ರಾಮದ ನಿವಾಸಿ ದೂರುದಾರ ತನ್ನ ತಾಯಿಯ ಪೌತಿ ಖಾತೆಯ ವಿಚಾರವಾಗಿ 2021ರಲ್ಲಿ ಬಂಟ್ವಾಳ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಾದ-ಪ್ರತಿವಾದ ನಡೆದು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಜಮೀನು ಮಂಜೂರಾತಿ ಆದೇಶವನ್ನು ಪುರಸ್ಕರಿಸಿದ್ದು, ಜಿಲ್ಲಾಧಿಕಾರಿ ನ್ಯಾಯಾಲಯದ ಆದೇಶದಂತೆ ಸಹಾಯಕ ಆಯುಕ್ತರ ನ್ಯಾಯಾಲಯ ಸಜಿಪಮನ್ನೂರು ಗ್ರಾಮದ ಸರ್ವೆ ನಂಬ್ರ 102/1 ರಲ್ಲಿ ಅರ್ಜಿದಾರರ ಪೌತಿ ಖಾತೆ ಮಾಡಿಕೊಡಲು ಬಂಟ್ವಾಳ ತಹಶೀಲ್ದಾರರಿಗೆ ಆದೇಶ ನೀಡಿತ್ತು.
ಆದರೆ ಈ ಕಡತವನ್ನು ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲಿ ಬಾಕಿ ಇರಿಸಿಕೊಳ್ಳಲಾಗಿದ್ದು, ಈ ಬಗ್ಗೆ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಹಾಗೂ ಕೇಸ್ ವರ್ಕರ್ ಸಂತೋಷ್ ಅವರಲ್ಲಿ ವಿಚಾರಿಸಿದಾಗ ಪೌತಿ ಖಾತೆ ಕೆಲಸದ ಕೇಸ್ ವರ್ಕರ್ ಸಂತೋಷ್ ಒಂದೂವರೆ ಸಾವಿರ ರೂ. ಹಾಗೂ ಉಪತಹಶೀಲ್ದಾರ್ ರಾಜೇಶ ನಾಯ್ಕ ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂ. ಮೊತ್ತದ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಅರ್ಜಿದಾರರು ಸಾಕ್ಷಿ ಪುರಾವೆಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಡಿಟಿ ರಾಜೇಶ ನಾಯ್ಕ ಹಾಗೂ ಕೇಸ್ ವರ್ಕರ್ ಸಂತೋಷ್ ವಿರುದ್ಧ ಪ್ರಕರಣ ದಾಖಲಾಗಿತ್ತು.