ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಶ್ರೀರಂಗಪಟ್ಟಣ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ, ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ.
ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.
ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಹೇಳಿಕೆ ನೀಡಿದ್ದರು.
ಹೇಳಿಕೆ ಸಂಬಂಧ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹೇಳಿಕೆ ಸಂಬಂಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.