ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ. ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ. ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ ಎಂದು ವಾಗ್ದಾಳಿ ಮಾಡಿದ್ದಾರೆ.
ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ ಎಂದಿದ್ದಾರೆ.