ಗುಂಡ್ಲುಪೇಟೆ: ತಾಲೂಕಿನ ಶ್ಯಾನಡ್ರಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕರುನಾಡ ಯುವಶಕ್ತಿ ಸಂಘಟನೆ ವತಿಯಿಂದ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.
ತಾಲೂಕಿನ ಶ್ಯಾನಡ್ರಹಳ್ಳಿ ಗ್ರಾಮದ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಅಧ್ಯಕ್ಷ ಮುನೀರ್ ಪಾಷಾ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ಸೇರಿದಂತೆ ಲೇಖನಿ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ಶಾಲಾ ಬಡ ಮಕ್ಕಳಿಗೆ ಉಪಯೋಗವಾಗಲಿ ಎಂಬ ಉದ್ದೇಶದಿಂದ ಶ್ಯಾನಡ್ರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 45 ಮಕ್ಕಳಿಗೆ ಪೆನ್ನು ಮತ್ತು ಪುಸ್ತಕಗಳನ್ನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳು ಕಲಿಕೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು. ಹೀಗಿದ್ದಲ್ಲಿ ಮಾತ್ರ ಉನ್ನತ ವ್ಯಾಸಂಗ ಮಾಡಿ ಜೀವನ ರೂಪಿಸಿಕೊಳ್ಳಲು ಸಾಧ್ಯ. ಮಕ್ಕಳಿಗೆ ಓದಿಗೆ ಪೂರಕವಾಗಿವ ನಿಟ್ಟಿನಲ್ಲಿ ಸ್ಥಲೀಯರು ಕೂಡ ಕೈಜೋಡಿಸಿ ಶಾಲೆಗೆ ಸೌಲಭ್ಯಗಳನ್ನು ನೀಡಲು ಮುಂದಾಗಬೇಕು. ಹೀಗಿದ್ದಲ್ಲಿ ಮಾತ್ರ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರುನಾಡ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳಾದ ಮಹೇಶ್, ಸಲಹೆಗಾರ ಕಾಳಿಂಗಸ್ವಾಮಿ ಸೇರಿದಂತೆ ಶಾಲಾ ಶಿಕ್ಷಕರು, ಮಕ್ಕಳು ಹಾಜರಿದ್ದರು.