ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿ ತೀರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮಖಂಡಿ ತಾಲೂಕು, ರಬಕವಿ-ಬನಹಟ್ಟಿ ತಾಲೂಕು, ಮುಧೋಳ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು.
ಮುಧೋಳ ನಗರದ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಿದ್ಧೇಶ್ವರ ಬ್ರಿಡ್ಜ್ ಬಳಿ ಘಟಪ್ರಭಾ ನದಿ ಹರಿವನ್ನು ವೀಕ್ಷಿಸಿದರು.
ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯ ವೀಕ್ಷಿಸಿ, ಪ್ರವಾಹ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಮಖಂಡಿ ತಾಲೂಕಿನ ಕೃಷ್ಣ ನದಿ ಪಾತ್ರದ ಮುತ್ತೂರು ಗ್ರಾಮದ ಸುಕ್ಷೇತ್ರ ಐತಿಹಾಸಿಕ ಮುತ್ತೂರು ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ದೇವಿಯ ದರ್ಶನ ಪಡೆದರು.
ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ್ರ ಹಾಗೂ ಆಯಾ ತಾಲೂಕುಗಳ ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು.
ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಹಿಪ್ಪರಗಿ ಜಲಾಶಯಕ್ಕೆ 1,34,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿಬಿಡಲಾಗುತ್ತಿದೆ.