ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ನಾಗಮಂಗಲ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪಶುಚಿಕಿತ್ಸಾಲಯ ಕಟ್ಟಡ ಉದ್ಘಾಟಿಸಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ನೂತನ ಪ್ರಾಥಾಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನಾ ನೇರವರಿಸಿ ಮಾತನಾಡಿದರು.
ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿ ಮತ್ತು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ನಿರ್ಲಕ್ಷ್ಯ ಮಾಡಿದರೆ ಒಂದು ಜಾನುವಾರಿಗೆ ಬಂದ ಕಾಯಿಲೆ ಮತ್ತೊಂದು ಜಾನುವಾರುಗಳಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.
ಜಿಲ್ಲೆಯಲ್ಲಿ ೭೨ ಸಾವಿರ ಜಾನುವಾರುಗಳು ಇದ್ದು, ಇವುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸುವುದರಿಂದ ರೈತರ ಆರ್ಥಿಕ ಸಂಕಷ್ಟವನ್ನು ತಪ್ಪಿಸಬಹುದು ಎಂದರು. ಕಾಲುಬಾಯಿ ಬೇನೆ ತಡೆಯುವ ಲಸಿಕೆಯಿಂದ ಜಿಲ್ಲೆಯ ಯಾವುದೇ ಜಾನುವಾರು ವಂಚಿತವಾಗಬಾರದು. ಈ ಕುರಿತಂತೆ ಪಶುಪಾಲಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿಗಳು ಪ್ರಚಾರ ಕಾರ್ಯದಲ್ಲಿ ಹಾಗೂ ಲಸಿಕಾ ಕಾರ್ಯಕ್ರಮದಲ್ಲಿ ಪೂರ್ಣ ಸಹಕಾರ ನೀಡುವಂತೆ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹರದನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಯಾಗಿ ೬೦ ವರ್ಷ ಕಳೆದಿದೆ. ಇದೀಗ ಅದರ ಪಕ್ಕದಲ್ಲೇ ರೂ.೧೮೦ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಪ್ರಾಥಮಿಕ ಆಸ್ಪತ್ರೆಯು ಹರದನಹಳ್ಳಿ ಪಂಚಾಯತಿ ವ್ಯಾಪ್ತಿಯ ಜನರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವಲ್ಲಿ ಸಹಕಾರಿಯಾಗಲಿದೆ ಎಂದರು.
ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೊಂದಣಿ ಮಾಡಿಸಿಕೊಳ್ಳಿ ಇದು ಆರೋಗ್ಯ ದೃಷ್ಟಿಯಿಂದ ತಪಾಸಣೆ ಹಾಗೂ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದರು. ಇದೇ ಸಂದರ್ಭದಲ್ಲಿ ಹರದನಹಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷೆ ಲಕ್ಷ್ಮಮ್ಮ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಪಶುವೈದ್ಯಾಧಿಕಾರಿ ಡಾ.ಸುರೇಶ್, ತಾಲ್ಲೂಕು ಪಂಚಾಯತ ಇಒ ಚಂದ್ರಮೌಳಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ನರಸಿಂಹಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ಸೇರಿದಂತೆ ಇನ್ನಿತರರು ಹಾಜರಿದ್ದರು.