ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಏಪ್ರಿಲ್ 24 ರಿಂದ ಮೂರು ದಿನಗಳ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 11:30ಕ್ಕೆ ಅವರು ಹೆಲಿಕಾಪ್ಟರ್ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12ಕ್ಕೆ ನಡೆಯುವ 2025ನೇ ಸಾಲಿನ 9ನೇ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ 3 ಗಂಟೆಗೆ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದ್ದು, ಅವರು ಬೆಟ್ಟದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 25ರಂದು ಸಿದ್ದರಾಮಯ್ಯ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, 9:30ಕ್ಕೆ ಚಾಮರಾಜನಗರಕ್ಕೆ ತೆರಳಲಿದ್ದಾರೆ. ಅಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ ಮತ್ತು ಮಹರ್ಷಿ ಭಗಿರಥ, ವಾಲ್ಮಿಕಿ ಪುತ್ಥಳಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ನಂತರ ಮೈಸೂರು ನಗರಕ್ಕೆ ತೆರಳಿ, ಸಂಜೆ 5ಕ್ಕೆ ಬೃಹತ್ ಮೈಸೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ಸಭೆ ನಡೆಸಲಿದ್ದಾರೆ.
ಏಪ್ರಿಲ್ 26ರಂದು ಮೈಸೂರಿನಲ್ಲಿ ವಲಯ ಕಚೇರಿ ಉದ್ಘಾಟನೆ, ಪಿರಿಯಾಪಟ್ಟಣದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಹಾಗೂ ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.