ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಐಜಿಪಿ ವಿಕಾಸ್ ಕುಮಾರ್ ಅವರು, ಮರು ನೇಮಕಕ್ಕೆ ಒತ್ತಾಯಿಸಬಾರದು ಎಂಬಂತೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದು ಮಾಡಿದ್ದರೂ, ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಅಂತಿಮ ತೀರ್ಮಾನವಾಗುವವರೆಗೆ ಕರ್ತವ್ಯಕ್ಕೆ ಹಾಜರಾಗಬಾರದು ಎಂದು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಸೂಚಿಸಿದೆ.
ಪೀಠ, “ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದಿತ್ತೇ ಅಥವಾ ಅಮಾನತು ಕ್ರಮ ಸಮರ್ಥನೀಯವೇ?” ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಸೂಚಿಸಿತು. ಸರ್ಕಾರ ತನ್ನ ಅಮಾನತು ಕ್ರಮವನ್ನು ಸಮರ್ಥಿಸಿಕೊಳ್ಳಲು ಅಗತ್ಯ ದಾಖಲೆಗಳನ್ನು ಪೀಠಕ್ಕೆ ನೀಡಬೇಕು ಎಂದು ತಿಳಿಸಿತು.
ರಾಜ್ಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಸರ್ಕಾರದ ಕ್ರಮ ಸೂಕ್ತವಷ್ಟೆ ಅಲ್ಲದೆ, ಕರ್ತವ್ಯಲೋಪದ ಸಾಕ್ಷ್ಯಾಧಾರಗಳನ್ನೂ ಒದಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ವಿಕಾಸ್ ಕುಮಾರ್ ಪರ ವಕೀಲರು, ಸಿಎಟಿ ಆದೇಶದ ಪ್ರಕಾರ ಮರು ನೇಮಕ ಮಾಡದಿದ್ದರೂ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿದರು.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಹಲವು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಈ ಪ್ರಕರಣದ ಮುಂದಿನ ವಿಚಾರಣೆ ಜುಲೈ 9ಕ್ಕೆ ಮುಂದೂಡಲಾಗಿದೆ.