ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಹೆಚ್ಚಿನ ಶ್ರಮ ವಹಿಸುತ್ತಿದ್ಧಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅರುಣ್ ತಿಳಿಸಿದರು.
ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರತಿದಿನವೂ ಸ್ವಚ್ಛತೆ ಮಾಡಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ 10 ಮಂದಿ ವೈದ್ಯರ ತಂಡವಿದ್ದು, ಎಲ್ಲರೂ ಕೂಡ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ನರ್ಸ್‍ಗಳ ಕೊರತೆಯಿದ್ದು, ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.
ಅಪಘಾತ ಸೇರಿದಂತೆ ಇನ್ನಿತರ ತುರ್ತು ಸಂದರ್ಭದಲ್ಲಿ ಮಾತ್ರ ನಾವು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಅಥವಾ ಮೈಸೂರಿಗೆ ಸೂಚಿಸುತ್ತೇವೆ. ಅದನ್ನು ಹೊರತು ಪಡಿಸಿ ಬಹುತೇಕ ರೋಗಿಗಳ ಖಾಯಿಲೆಗಳನ್ನು ಇಲ್ಲೆ ಬಗೆಹರಿಸಲು ಪ್ರಯತ್ನಿಸುತ್ತೇವೆ. ರಾತ್ರಿ ಪಾಳಿಯಲ್ಲಿ ಈಗ ಒಬ್ಬರು ವೈದ್ಯರು ಕೆಲಸ ನಿರ್ವಹಿಸುತ್ತಿದ್ದು, ಮೂರು ಮಂದಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ತಾಯಿ ಮಕ್ಕಳ ಆಸ್ಪತ್ರೆಯಲ್ಲಿಯೂ ಕೂಡ ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಬಹುತೇಕ ಸಾಮಾನ್ಯ ಹೆರಿಗೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಆಸ್ಪತ್ರೆಯಲ್ಲೆ ಮಾಡಲಾಗುತ್ತದೆ. ಆಸ್ಪತ್ರೆಯಲ್ಲಿ ಬ್ಲಡ್ ಸ್ಟೊರೇಜ್‍ಯಿದ್ದು, ಮುಂದಿನ ದಿನಗಳಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿ ಹೆಚ್ಚೆಚ್ಚು ರಕ್ತ ಶೇಖರಣೆ ಮಾಡಲು ಕ್ರಮ ವಹಿಸಲಾಗುವುದು. ಆಸ್ಪತ್ರೆಯಲ್ಲಿ ಪ್ರಸ್ತುತ ಎರಡು ಆಂಬ್ಯುಲೆನ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅಗತ್ಯಬಿದ್ದರೆ ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.