ಚಾಮರಾಜನಗರ: ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆ ಗಣ್ಯರು ಮಾಲಾರ್ಪಣೆ ಮಾಡಿದರು. ಬಳಿಕ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ಆರಂಭದಲ್ಲಿ ಬುದ್ಧ ದಮ್ಮ ವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಡಾ. ಬಿ.ಆರ್. ಅಂಬೇಡ್ಕರ್‍ರವರ ಪರಿನಿಬ್ಬಾಣ ದಿನವಾದ ಇಂದು ಜಿಲ್ಲಾಡಳಿತದಿಂದ ಗೌರವ ಸಲ್ಲಿಸಲಾಗಿದೆ. ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ನೀಡಿರುವ ಸಮಾನ ಅವಕಾಶಗಳಿಂದ ವರ್ಷದಲ್ಲಿ ಪ್ರತಿದಿನವು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಬೇಕಾಗಿದೆ ಎಂದರು.

ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸಲು ಎಲ್ಲರೂ ದೃಢಸಂಕಲ್ಪ ಮಾಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ, ಸಂದೇಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ. ಆ ಮೂಲಕ ಚಾಮರಾಜನಗರ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತರಾದ ರಾಮ್‍ದಾಸ್, ತಹಸೀಲ್ದಾರ್ ಬಸವರಾಜು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕ್ರಮದಲ್ಲಿ ಇದ್ದರು.