Friday, April 11, 2025
Google search engine

Homeರಾಜ್ಯಸುದ್ದಿಜಾಲಡಾ. ಹೆಚ್.ಸಿ ಮಹದೇವಪ್ಪ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

ಡಾ. ಹೆಚ್.ಸಿ ಮಹದೇವಪ್ಪ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಅವರು ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು. ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು ,ಈ ಸಂಬಂಧ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬಿನಿ ನದಿಯಿಂದ ಪ್ರವಾಹ ಉಂಟಾಗಿದ್ದು ಇದರಿಂದ ಹಾನಿ ಆಗಿರುವ ಮನೆ ಹಾಗೂ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಪರಿಹಾರ ನೀಡಲಾಗುವುದು. ಈಗ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಪ್ರವಾಹ ಉಂಟಾಗಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಮೈಸೂರು ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿ ಆಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. 46 ಮನೆಗಳಿಗೆ ನೀರು ಬಂದಿದೆ. ಗಂಜಿ ಕೇಂದ್ರದಲ್ಲಿ 446 ಜನ ಸೌಲಭ್ಯ ಪಡೆಯುತ್ತಿದ್ದಾರೆ. 80 ಕುಟುಂಬಗಳು ಪ್ರವಾಹದಿಂದ ಬಾಧಿತರಾಗಿದ್ದಾರೆ. ಈ 80 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ ಸೂಕ್ತ ಜಾಗವನ್ನು ಗುರುತಿಸಿ ಅಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿ, ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಸರ್ಕಾರದ ವತಿಯಿಂದ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಊರಿನ ಮುಖಂಡರು ಮಾತನಾಡಿ ಬೊಕ್ಕಹಳ್ಳಿ ಗ್ರಾಮ ಪ್ರತಿ ವರ್ಷ ಮುಳುಗಡೆ ಆಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೇರೆ ಕಡೆ ನಿವೇಶನಗಳನ್ನು ಕೊಟ್ಟು ಮನೆ ನಿರ್ಮಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಸಂತ್ರಸ್ತರಿಗೆ ಬೆಡ್ ಶಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular