ಕೋಲ್ಕತ್ತ: ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಟಿಎಂಸಿ ಶಾಸಕರೊಬ್ಬರ ಮನೆ ಸೇರಿದಂತೆ ಕೋಲ್ಕತ್ತದ ಆರು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಇಂದು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಟಿಎಂಸಿಯ ಸೆರಾಂಪೋರ್ ಶಾಸಕ ಸುದೀಪ್ಲೋ ರಾಯ್ ಅವರ ನಿವಾಸ ಹಾಗೂ ಔಷಧಿ ವ್ಯಾಪಾರಿಯೊಬ್ಬರ ಮನೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಜೊತೆಗೆ ಇತರ ೪ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಡಿ ಅಧಿಕಾರಿಗಳ ಈ ದಾಳಿಯು ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರಗಳ ಕುರಿತ ತನಿಖೆಯ ಅಂಗವಾಗಿದೆ. ನಮಗೆ ಕೆಲವು ಖಚಿತ ಮಾಹಿತಿ ದೊರೆತ ಹಿನ್ನೆಲೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ಆರ್.ಜಿ.ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಮೂವರು ಸಹಚರರನ್ನು ಬಂಧಿಸಿದೆ.