ಮದ್ದೂರು: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಉದ್ಯೋಗಕಷ್ಟೆ ಸೀಮಿತವಾಗಬಾರದು, ಜ್ಞಾನ, ಸಂಸ್ಕಾರ, ಗುರು ಹಿರಿಯರನ್ನು ಗೌರವಿಸುವ ರೂಢಿಯನ್ನು ಬೆಳೆಸಿಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ಶನಿವಾರ ಕನ್ನಡ ಸಂಘ ಉದ್ಘಾಟನೆ ಹಾಗೂ ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ವ್ಯವಸ್ಥೆಯಲ್ಲಿ ಅಂಕವಷ್ಟೇ ಮುಖ್ಯವಲ್ಲ. ಓದಿನ ಜತೆಗೆ ಬದುಕನ್ನೂ ಉತ್ತಮ ರೀತಿಯಾಗಿ ನಡೆಸುಬ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕು. ಸಮಯ ವ್ಯರ್ಥ ಮಾಡದೆ ಎಲ್ಲ ವಿಚಾರಗಳ ಬಗ್ಗೆಯೂ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಿಗೆ ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ಮನೋಬಲದಿಂದ ತಮ್ಮ ಕನಸುಗಳನ್ನು ಸಾಧಿಸಿಕೊಳ್ಳಬಹುದು ಎಂದು ಕಿವಿ ಮಾತು ಹೇಳಿದರು.
ಎಚ್.ಕೆ.ವೀರಣ್ಣಗೌಡರು ವಿದ್ಯಾಸಂಸ್ಥೆ ಆರಂಭಿಸಿ ಈ ಭಾಗದಲ್ಲಿ ಶಾಲಾ ಕಾಲೇಜು ತೆರೆದು ಶಿಕ್ಷಣ ಸೇವೆ ಮಾಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ವಿದ್ಯೆ ನೀಡುವ ಮೂಲಕ ಶಿಕ್ಷಣ ಕ್ರಾಂತಿಯನ್ನೆ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಭಾರತದ ಸಂಸ್ಕೃತಿ ಆಚಾರ ವಿಚಾರವನ್ನು ಗೌರವಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ವಾಸ್ತವದ ಜಗತ್ತಿನಲ್ಲಿ ಸದೃಢವಾಗಿ ಜೀವನ ಮಾಡಬೇಕಾದರೆ ವಿದ್ಯೆಯ ಜತೆಗೆ ಸಂಸ್ಕಾರದ ಅಗತ್ಯವಿದೆ. ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಇಂತಹ ವಿದ್ಯಾಸಂಸ್ಥೆಗಳನ್ನು ಕಟ್ಟಿರುವುದರಿಂದ ಅನೇಕರು ತಮ್ಮ ಬದುಕಿನ ದಿಕ್ಕನ್ನೇ ಬದಲಾಯಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಎಚ್.ಕೆ.ವೀರಣ್ಣಗೌಡರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಎನ್.ಚಲುವರಾಯಸ್ವಾಮಿ, ರಾಣಿಬೆನ್ನೂರು ಶಾಸಕ ಪ್ರಕಾಶ್ ಕೆ.ಕೋಳಿವಾಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರುಗಳನ್ನು ಅಭಿನಂದಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು, ಸಂಸ್ಥೆಯ ಅಧ್ಯಕ್ಷ ಸ್ವರೂಪ್ ಚಂದ್, ಕಾರ್ಯದರ್ಶಿ ಅಪೂರ್ವ ಚಂದ್ರ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೋ. ಜಯಪ್ರಕಾಶಗೌಡ, ಪ್ರಾಂಶುಪಾಲ ಯು.ಎಸ್.ಶಿವಕುಮಾರ್ ಆಡಳಿತ ಮಂಡಳಿ ಸದಸ್ಯರು ಇದ್ದರು.