ರಾಮನಗರ: ಸಮಾಜದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಹೆಣ್ಣು ಮಕ್ಕಳು ಸಾಧನೆಯನ್ನು ಮಾಡುತ್ತಿದ್ದಾರೆ. ಇರುವ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.
ಅವರು ಜ. ೨೪ರ ಬುಧವಾರ ನಗರದ ಗುರು ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದಡಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಮಕ್ಕಳ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಕೃತಿಯಲ್ಲಿ ಬಾಲ್ಯದಲ್ಲಿ ಹೆಣ್ಣು ತನ್ನ ತಂದೆ ತಾಯಿಯ ಆಶ್ರಯದಲ್ಲಿ, ಯೌವನದಲ್ಲಿ ಗಂಡನ ಆಶ್ರಯದಲ್ಲಿ, ಮುಪ್ಪಿನಲ್ಲಿ ಮಕ್ಕಳ ಆಶ್ರಯದಲ್ಲಿ ಇದ್ದಂತಹ ಹೆಣ್ಣು ಇಂದು ಸಮಾಜದಲ್ಲಿ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಶಿಕ್ಷಣ ಮತ್ತು ಸ್ವಾವಲಂಬನೆ ಎಂದು ತಿಳಿಸಿದರು. ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅವರನ್ನು ಉತ್ತಮ ಮಟ್ಟಕ್ಕೆ ತರಬೇಕು, ಲಿಂಗ ಸಮಾನತೆಯನ್ನು ಉತ್ತೇಜಿಸುವುದು, ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸುವುದು, ಹೆಣ್ಣು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು, ಭಾರತೀಯ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜ. ೨೪ ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗೋವಿಂದರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜೇಗೌಡ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕರಾದ ಮಂಜುನಾಥ್,ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಗವೇಣಿ, ತಾಲ್ಲೂಕು ಆರೋಗ್ಯಾಧಿಕಾರಿ ಉಮಾದೇವಿ, ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.