ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಸಂಬಂಧ ನಗರದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯವುಳ್ಳ ವಿವಿಧ ವರ್ಣಗಳಿಂದ ಕೂಡಿದ ರೇಷ್ಮೆ ಸೀರೆಗಳನ್ನು ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ನಗರದ ಜಿಲ್ಲಾಡಳಿತ ಭವನದ ಒಳಾವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೈಮಗ್ಗ ನೇಕಾರರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮುದ್ರಿಸಿರುವ ಬಣ್ಣಬಣ್ಣದ ರೇಷ್ಮೆ ಸೀರೆಗಳನ್ನು ಪ್ರದರ್ಶಿಸಿ ವಿಭಿನ್ನವಾದ ಮತದಾನದ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ ಅವರು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕುರಿತ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ಚುನಾವಣಾ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕೆಂಬುದೇ ಜಾಗೃತಿ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಮತದಾನ ದಿನವಾದ ಏಪ್ರಿಲ್ ೨೬ರಂದು ಚುನಾವಣಾ ನಿರತ ಎಲ್ಲಾ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು ಕೊಳ್ಳೇಗಾಲದ ಕೈಮಗ್ಗ ನೇಕಾರರು ವಿಶೇಷವಾಗಿ ವಿನ್ಯಾಸಗೊಳಿಸಿ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಇದು ಸಹಕಾರಿಯಾಗಲಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ತಿಳಿಸಿದರು.