ಬೆಂಗಳೂರು: ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದತಿ ಕೋರಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶ ಕಾಯ್ದಿರಿಸಿದೆ.
ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಲಾಗಿದೆ. ತನಿಖೆ ತಡೆ ನೀಡಿರುವ ಮಧ್ಯಂತರ ಆದೇಶವು ತೀರ್ಪು ಪ್ರಕಟಿಸುವವರೆಗೆ ಚಾಲ್ತಿಯಲ್ಲಿರಲಿದೆ ಎಂದು ಆದೇಶಿಸಿತು.
ಅರ್ಜಿದಾರ ಆದರ್ಶ್ ಐಯ್ಯರ್ ಪ್ರತಿನಿಧಿಸಿದ್ದ ವಕೀಲ ಪ್ರಶಾಂತ್ ಭೂಷಣ್ ಅವರು “ದೂರಿನಲ್ಲಿನ ಆರೋಪವು ಸುಲಿಗೆಗೆ ಕ್ಲಾಸಿಕ್ ಉದಾಹರಣೆಯಾಗಿದೆ. ಸುಲಿಗೆಗೆ ಗುರಿಯಾಗಿರುವ ವ್ಯಕ್ತಿಯೂ ಅಪರಾಧದಿಂದ ಲಾಭ ಪಡೆದಿದ್ದಾರೆ. ಬಿಜೆಪಿಗೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡಿದ ಬಳಿಕ ಅವರ ವಿರುದ್ಧ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ತನಿಖೆ ನಿಲ್ಲಿಸಲಾಗಿದೆ. ಈ ಕಾರಣಕ್ಕಾಗಿ ಅವರು ದೂರು ನೀಡಿಲ್ಲ. ಸಾಮಾನ್ಯ ಜನರೇ ಈ ಸಂಬಂಧ ದೂರು ನೀಡುವುದು” ಎಂದು ಸಮರ್ಥಿಸಿದರು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಜಿ ರಾಘವನ್ ಅವರು “ಐಪಿಸಿ ಸೆಕ್ಷನ್ 384ರ ವ್ಯಾಖ್ಯಾನವು ಪ್ರತಿಯೊಂದು ಪ್ರಕರಣದ ವಾಸ್ತವಿಕ ವಿಚಾರದ ಮೇಲೆ ಬದಲಾಗುವುದಿಲ್ಲ. ಸಂತ್ರಸ್ತರು ನ್ಯಾಯಾಲಯದ ಮುಂದೆ ಬಂದಿಲ್ಲ, ಈ ಪ್ರಕರಣದಲ್ಲಿನ ದೂರುದಾರರಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಇಲ್ಲಿ ಸುಲಿಗೆ ವಿಚಾರ ಅನ್ವಯಿಸುವುದಿಲ್ಲ. ರಂಜನೆಗಾಗಿ ಪ್ರಕರಣವನ್ನು ಪರಿಗಣಿಸಲಾಗದು” ಎಂದರು.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರಾಗಿರುವ ಆದರ್ಶ್ ಆರ್. ಐಯ್ಯರ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜೆ ಪಿ ನಡ್ಡಾ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 384 (ಸುಲಿಗೆ), 120ಬಿ (ಕ್ರಿಮಿನಲ್ ಪಿತೂರಿ) ಜೊತೆಗೆ 34ರ ಅಡಿ ಪ್ರಕರಣ ದಾಖಲಿಸಲು ತಿಲಕ್ ನಗರ ಪೊಲೀಸರಿಗೆ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿತ್ತು. ಇದರ ಅನ್ವಯ ಎಫ್‌ಐಆರ್ ದಾಖಲಾಗಿದೆ.