ಮಡಿಕೇರಿ : ರಾಷ್ಟ್ರವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ವಕೀಲ ಯಾಲದಾಳು ಮನೋಜ್ ಬೋಪಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಮನೋಜ್ ಬೋಪಯ್ಯ ಅವರು ವಿವರಿಸಿದರು.ನಾವೂ ಸಹ ಶಿಕ್ಷಣ ಜೊತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಮೇಲೆ ಬಂದವರು, ಆದ್ದರಿಂದ ಮನೆಯಲ್ಲಿ ಕೆಲಸ ಮಾಡುವುದು ತಪ್ಪಲ್ಲ, ಆದರೆ ಶಾಲೆಗೆ ಹೋಗುವುದನ್ನು ತಪ್ಪಿಸಬಾರದು ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಸದೃಢ ಸಮಾಜ ನಿರ್ಮಾಣಕ್ಕೆ ಬಾಲಕಾರ್ಮಿಕ ಪದ್ಧತಿ ಒಂದು ಪಿಡುಗಾಗಿದ್ದು, ಇದನ್ನು ತೊಲಗಿಸಬೇಕು. ದೇಶ ಕಟ್ಟಲು ಎಲ್ಲರೂ ಪಣತೊಡಬೇಕು ಎಂದರು.ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳದಂತೆ ಗಮನಹರಿಸಬೇಕು. ಸ್ವಾತಂತ್ರ್ಯ ನಂತರ ರಾಜ್ಯ ನಿರ್ದೇಶಕ ತತ್ವಗಳಲ್ಲೂ ಸಹ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹೇಳಲಾಗಿದೆ. 1986 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ವಿವರಿಸಲಾಗಿದೆ. ಹಾಗೆಯೇ 2016 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ವಿರೋಧ ಕಾಯ್ದೆ ಜಾರಿಗೆ ಬಂದಿದೆ ಎಂದು ಮನೋಜ್ ಬೋಪಯ್ಯ ಅವರು ಹೇಳಿದರು.
‘ಮಕ್ಕಳು ವ್ಯಾಸಂಗದ ಜೊತೆಗೆ ಕಲೆ, ಸಂಸ್ಕøತಿ, ಅಭಿನಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದ್ದು, ಇವು ಬಾಲಕಾರ್ಮಿಕ ಪದ್ಧತಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.’
ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಳ್ಳುವುದು ಕಂಡುಬಂದಲ್ಲಿ 1098 ಅಥವಾ 112 ರ ಸಹಾಯವಾಣಿಗೆ ಕರೆ ಮಾಡಬಹುದು. ದಂಡ ವಿಧಿಸಲು ಅವಕಾಶವಿದೆ ಎಂದು ವಕೀಲರು ವಿವರಿಸಿದರು.ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಬಾಲಕಾರ್ಮಿಕ ಪದ್ಧತಿಯು ಕೆಟ್ಟದಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಬೇಕು. ಹಾಗಾದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹೇಳಿದರು.‘14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿ ನಿಲಯ ವ್ಯವಸ್ಥೆ ಇದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವಸತಿ ಶಾಲೆಗಳು ಉತ್ತಮ ಹೆಸರು ಮಾಡುತ್ತಿದ್ದು, ಇಂತಹ ಅವಕಾಶಗಳನ್ನು ಮಕ್ಕಳು ಬಳಸಿಕೊಳ್ಳಬೇಕು ಎಂದು ವರ್ಣಿತ್ ನೇಗಿ ಅವರು ಸಲಹೆ ಮಾಡಿದರು.’
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.ಮಕ್ಕಳಲ್ಲಿ ಒಳ್ಳೆಯ ನಡವಳಿಕೆ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು, ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್ ಇತರರು ಇದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಬಿ.ಎಸ್.ಜಯಪ್ಪ ನಿರೂಪಿಸಿ, ವಂದಿಸಿದರು.