ಮೈಸೂರು: ಫೆಬ್ರವರಿ ೨೨ ಮತ್ತು ೨೩ ರಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಣ್ಣ ಕೈಗಾರಿಕೆಗಳ ಸಂಘದ [ಕಾಸಿಯಾ] ಸಹಯೋಗದಲ್ಲಿ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು. ಆಯೋಜಿಸಲಾಗಿದೆ ಎಂದು ಕಾಸಿಯಾ ಸಂಘದ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ತಿಳಿಸಿದರು.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಈ ಮೇಳವನ್ನು ಕೈಗೊಳ್ಳಲಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ ೧೦.೩೦ ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ, ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಕೈಗಾರಿಕ ವಾಣಿಜ್ಯ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಭಾಆಸೇ, ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ , ಮೈಸೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ, ಕಾಂಗ್ರೆಸ್ ೫ ಗ್ಯಾರಂಟಿ ಯೋಜನೆ ಅನುಷ್ಠಾನ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಅವರು ಭಾಗವಹಿಸುವರು ಎಂದು ತಿಳಿಸಿದರು.
ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಸಮಾರೋಪ ಸಮಾರಂಭವನ್ನು ೨೩ ರಂದು ಸಂಜೆ ೩.೩೦ ಗಂಟೆಗೆ ಆಯೋಜಿಸಲಾಗಿದ್ದು ಮೈಸೂರು ಕೊಡಗು ಲೋಕಸಭಾ ಸದಸ್ಯ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು. ಈ ಎರಡು ದಿನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ ೩ ಮಳಿಗೆಗೆ ಅತ್ಯತ್ತಮ ಪ್ರಶಸ್ತಿಯನ್ನು ನೀಡಲಾಗುವುದು ಎಂದರು.