ಮೈಸೂರು: ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಜತೆಗೆ ನಮ್ಮ ವ್ಯಾಪ್ತಿಗೊಳಪಡುವ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಭರವಸೆ ನೀಡಿದ್ದಾರೆ.
ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶನಿವಾರ ನಡೆಸಲಾದ ಪ್ರತಿಭಟನೆ ವೇಳೆ ಪ್ರತಿಭಟನಾಕಾರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, “ಸರ್ಕಾರದ ತೀರ್ಮಾನದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿನಿತ್ಯ ಹಗಲಿನ ವೇಳೆ ಕನಿಷ್ಠ 7 ಗಂಟೆ ವಿದ್ಯುತ್ ಪೂರೈಕೆ ಮಾಡುವುದು ಹಾಗೂ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋದಲ್ಲಿ ನಿಗದಿತ ಅವಧಿಯೊಳಗೆ ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಸುವ ಬಗ್ಗೆ ಕ್ರಮವಹಿಸಲಾಗುವುದು”, ಎಂದು ಭರವಸೆ ನೀಡಿದರು.
“ಉಳಿದಂತೆ ರೈತರು ಹೊಸ ವಿದ್ಯುತ್ ಸಂಪರ್ಕ ಪಡೆಯಲು ಈ ಹಿಂದಿನಂತೆ ಅಕ್ರಮ-ಸಕ್ರಮ ಜಾರಿಗೊಳಿಸುವುದು, ಹೊಸ ಸಂಪರ್ಕ ಪಡೆಯಲು ರೈತರೇ ವೆಚ್ಚ ಭರಿಸಬೇಕೆಂಬ ನಿಯಮವನ್ನು ಕೈಬಿಡುವುದು, ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆ ಕೈಬಿಡುವುದು ಹಾಗೂ ಗೃಹ ಬಳಕೆ ವಿದ್ಯುತ್ ದರ ಏರಿಕೆ ಹಿಂಪಡೆಯಬೇಕೆಂಬ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.
ಇದಕ್ಕೂ ಮುನ್ನ, ರೈತರ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಆನಂದೂರು ಪ್ರಭಾಕರ್ ಹಾಗೂ ಇನ್ನಿತರರು ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೆಸ್ಕ್ ಪ್ರಧಾನ ವ್ಯವಸ್ಥಾಪಕ(ಖರೀದಿ) ಎಲ್. ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.