Friday, April 11, 2025
Google search engine

Homeರಾಜ್ಯತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ರೈತರ ಆಕ್ರೋಶ

ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ರೈತರ ಆಕ್ರೋಶ

ಮಂಡ್ಯ: ಜಲಕ್ಷಾಮದ ನಡುವೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆ ಯತ್ನ ಮಾಡಿದರು.

ಕೆಆರ್‍ಎಸ್ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಕುಸಿತಗೊಂಡು ಇಲ್ಲಿನ ಬೆಳೆಗಳು ನೆಲಕಚ್ಚಿವೆ. ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ರೈತ ಸಂಘದ ಮುಖಂಡರಾದ ಕೆ.ಬೋರಯ್ಯ, ಸುನಂದ ಜಯರಾಮ್, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ಇಂಡವಾಲ ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಮಾಂತಪ್ಪ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು, ಪಕ್ಕದ ತಮಿಳುನಾಡಿಗೆ ನೀರು ಹರಿಸಿ ಜಿಲ್ಲೆಯ ಜನತೆಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ಇಲ್ಲಿನ ರೈತರು ನೀರಿಲ್ಲದೆ ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ಕೊಟ್ಟಿಲ್ಲ. ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ಇಂತಹ ಸಂಕಷ್ಟ ಪರಿಸ್ಥಿತಿ ಎದುರಾಗಿದೆ. ಮೊದಲು ನಾಲೆಗಳಿಗೆ ನೀರು ಬಿಡುಗಡೆ ಮಾಡಿ ಎಂದು ರೈತರು ಒತ್ತಾಯಿಸಿದರು.

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ನೀರು ಬಿಡಲಾಗುತ್ತಿದೆ ಎಂದು ಸಬೂಬು ಹೇಳಿ ಸರ್ಕಾರ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಕೆಆರ್‍ಎಸ್ ಅಣೆಕಟ್ಟೆಯಿಂದ 4 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವುದು ಏಕೆ ಎಂದು ರೈತ ಮುಖಂಡರು ಪ್ರಶ್ನಿಸಿದರು. ರೈತರ ಹಿತ ಕಾಪಾಡದೆ ರೈತರ ಬೆಳೆಗಳ ರಕ್ಷಣೆಗೆ ನೀರು ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಅನ್ಯಾಯ ಮಾಡಿ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular