ಮಂಡ್ಯ: ಜಿಲ್ಲೆಯ ಪಾಂಡವಪುರ, ಬೆಳ್ಳೂರು ಮತ್ತು ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ‘ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ’ಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪ್ರಕರಣದಲ್ಲಿ ಇನ್ನು ಹೆಚ್ಚು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಖೆ ವ್ಯಕ್ತಪಡಿಸಲಾಗಿತ್ತು. ತನಿಖೆ ಮುಂದುವರೆಸಿದ್ದ ಪೊಲೀಸರು ಈಗ ಮತ್ತೆ ಮೂವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಖತರ್ನಾಕ್ ಗಳು.
ಕೆ.ಆರ್.ನಗರದ ಶಂಕರ ಜಿ.ಎನ್. (54) ಡಿಪ್ಲೊಮಾ ಇನ್ ರೇಡಿಯಾಲಜಿ ಮಾಡಿ ಸ್ಕ್ಯಾನಿಂಗ್ ಸೆಂಟರ್ ಇಟ್ಟುಕೊಂಡಿದ್ದ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ (41) ಮತ್ತು ಹರಳಹಳ್ಳಿ ಗ್ರಾಮದ ಜಬ್ಬರ್ ಬಿನ್ ಜಿಯಾವುಲ್ಲಾ (46) ಬಂಧಿತರು. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ ಹಾಗೂ ಒಂದು ಕಾರು ವಶಕ್ಕೆ ಪಡೆಯಲಾಗಿತ್ತು. ಇದೀಗ ಮತ್ತೆ ಒಂದು ಕಾರು (ತವೇರಾ) ಪೊಲೀಸರು ವಶಪಡಿಸಿಕೊಂಡಿದ್ದಾರೆ.
‘ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಂಡ್ಯ ಜಿಲ್ಲೆಯ 7 ವಿಶೇಷ ತನಿಖಾ ತಂಡಗಳು, ಶಂಕಿತರನ್ನು ಕರೆತಂದು ವಿಚಾರಣೆ ನಡೆಸುತ್ತಿವೆ. ಎಲ್ಲ ಆರೋಪಿಗಳನ್ನು ಬಂಧಿಸಿ, ಈ ಕೃತ್ಯಕ್ಕೆ ಸಂಪೂರ್ಣ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಂಡಿದ್ದೇವೆ’ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.