Saturday, April 19, 2025
Google search engine

Homeರಾಜ್ಯಸುದ್ದಿಜಾಲಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 8,66,224 ಮತದಾರರು:ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 8,66,224 ಮತದಾರರು:ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 8,66,224 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಅಂತಿಮ ಮತದಾರರ ಪಟ್ಟಿ ಪ್ರಚುರ ಪಡಿಸುವ ಸಂಬಂಧ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಈ ವಿವರ ನೀಡಿದರು.

ದಿನಾಂಕ 01-01-2024ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 8,64,774 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 8,66,224 ಮತದಾರರಿದ್ದಾರೆ. ಪರಿಷ್ಕರಣಾ ಅವಧಿಯಲ್ಲಿ ಒಟ್ಟು 12,772 ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. 11,322 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಒಟ್ಟಾರೆ ಕರಡು ಮತದಾರರ ಪಟ್ಟಿ ಪ್ರಕಟಿತ ದಿನಾಂಕದಿಂದ ಈವರೆಗೆವಿಗೆ 1,450 ಮತದಾರರು ಹೆಚ್ಚುವರಿಯಾಗಿ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಾರ 2,22,674 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 2,21,989 ಮತದಾರರಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಾರ 2,17,317 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 2,17,869 ಮತದಾರರಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಾರ 2,10,679 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 2,12,206 ಮತದಾರರಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಾರ 2,14,104 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 2,14,160 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಯವರು ವಿವರಿಸಿದರು.

ಜಿಲ್ಲೆಯಲ್ಲಿ ಮತಗಟ್ಟೆ ಪುನರ್ ವಿಂಗಡಣೆ ಪೂರ್ವದಲ್ಲಿ 982 ಮತಗಟ್ಟೆಗಳಿದ್ದವು. ಪುನರ್ ವಿಂಗಡಣೆ ನಂತರ 983 ಮತಗಟ್ಟೆಗಳಿವೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 253 ಮತಗಟ್ಟೆಗಳು ಪುನರ್ ವಿಂಗಡಣೆ ಪೂರ್ವದಲ್ಲಿ ಇದ್ದವು. ಚುನಾವಣಾ ಆಯೋಗದ ಅನುಮೋದನೆಯಂತೆ ಈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡಿನ ಒಳಭಾಗದಲ್ಲಿರುವ ಕೊಕ್ಕೆಬೋರೆ ಗ್ರಾಮದ 209 ಮತದಾರರು ಮತ ಚಲಾಯಿಸಲು ಮೂಲ ಮತಗಟ್ಟೆಯಿರುವ ಕೊಂಬುಡಿಕ್ಕಿ ಗ್ರಾಮಕ್ಕೆ ಪ್ರಯಾಣಿಸಿ ಮತ ಚಲಾಯಿಸುತ್ತಿದ್ದರು. ಇವರಿಗೆ ಅನುಕೂಲವಾಗುವಂತೆ ಕೊಕ್ಕೆಬೋರೆ ಗ್ರಾಮದಲ್ಲಿಯೇ ಹೊಸದಾಗಿ ಮತಗಟ್ಟೆ ತೆರೆಯಲಾಗಿದೆ. ಉಳಿದಂತೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 241, ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 239, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 249 ಮತಗಟ್ಟೆಗಳು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 983 ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯಲ್ಲಿದ್ದಂತೆ ಒಟ್ಟು 8,191 ಯುವ ಮತದಾರರಿದ್ದು ಹೊಸದಾಗಿ 5,010 ಯುವ ಮತದಾರರು ಸೇರ್ಪಡೆಗೊಂಡಿದ್ದು ಒಟ್ಟಾರೆ ಅಂತಿಮ ಮತದಾರರ ಪಟ್ಟಿಯಲ್ಲಿ 13,201 ಯುವ ಮತದಾರರು ನೊಂದಣಿಯಾಗಿದ್ದಾರೆ. ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಮತದಾರರು ಮತ್ತು 18 ಹಾಗೂ ಇದರ ಮೇಲ್ಪಟ್ಟ ಯುವ ಮತದಾರರ ಹೆಸರನ್ನು ನಿರಂತರ ಪರಿಷ್ಕರಣೆ ಅವಧಿಯಲ್ಲಿ ಗರುಡ (ಉಂಖUಆಂ) ಅಥವಾ ವಿ.ಹೆಚ್.ಎ (ಗಿಊಂ) ಆಪ್ ಮೂಲಕ ಅರ್ಜಿ ಪಡೆದು ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇಂದು ಹೊರಡಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಕೈಬಿಟ್ಟು ಹೋಗಿದ್ದಲ್ಲಿ, ನಿಧನ ಹೊಂದಿದ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿದುಕೊಂಡಿರುವುದು ಕಂಡುಬಂದಲ್ಲಿ ಈ ಮಾಹಿತಿಯನ್ನು ಆಯಾ ತಾಲೂಕು ತಹಶೀಲ್ದಾರ್ ಕಚೇರಿಗೆ ನೀಡಬೇಕು. ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಯಾರೇ ಅರ್ಹರು ಮತದಾನದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ ಶೇ. 100ರಷ್ಟು ದೋಷ ರಹಿತ ಮತದಾರರ ಪಟ್ಟಿ ತಯಾರಿಸಲು ಮತ್ತು ಮತದಾನದ ಶೇಕಡವಾರು ಪ್ರಮಾಣವನ್ನು ಹೆಚ್ಚಿಸಲು ರಾಜಕೀಯ ಪಕ್ಷಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿಯವರು ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆಯಾಗಿದ್ದು ಟೋಲ್ ಫ್ರೀ ಸಂಖ್ಯೆ 1950 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ಕೊಳ್ಳೇಗಾಲದ ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಆಯಾ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಸಹಾಯವಾಣಿ ಲಭ್ಯವಿದೆ. ಕೊಳ್ಳೇಗಾಲದ ಉಪವಿಭಾಗಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08224-253615, ಹನೂರು ತಾಲೂಕು ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ 08224-268032, ಕೊಳ್ಳೇಗಾಲ ತಾಲೂಕು ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ 08224-252046, ಯಳಂದೂರು ತಾಲೂಕು ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ 08226-240029, ಚಾಮರಾಜನಗರ ತಾಲೂಕು ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ 08226-200254, ಗುಂಡ್ಲುಪೇಟೆ ತಾಲೂಕು ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ 08229-222125 ಸಂಪರ್ಕಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮತದಾರರ ಪಟ್ಟಿಯನ್ನು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಚುನಾವಣಾ ತಹಶೀಲ್ದಾರ್ ಅಶೋಕ್, ಶಿರಸ್ತೇದಾರ್ ಬಸವರಾಜು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಹೆಚ್. ನಸ್ರುಲ್ಲಾ ಖಾನ್, ಎನ್. ನಾಗಯ್ಯ, ನಾಗರಾಜು, ಕೂಸಣ್ಣ, ಬ್ಯಾಡಮೂಡ್ಲು ಬಸವಣ್ಣ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular