ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು ೩ ಲಕ್ಷ ೭೩ ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ೧ ಲಕ್ಷ ೨೦ ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ ೫೮,೦೦೦ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ.
ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಶಾಸಕ ದಿನೇಶ್ ಗೂಳಿಗೌಡ, ಇಷ್ಟು ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ೫ ಪ್ರಮುಖ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಆಶ್ವಾಸನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಡೇರಿಸುತ್ತಾ ಬರುತ್ತಿದ್ದಾರೆ. ಹೀಗೆ ಅಭಿವೃದ್ಧಿ ಕಾರ್ಯಗಳ ಸಹಿತ ಗ್ಯಾರಂಟಿ ಯೋಜನೆಗಳನ್ನು ಸಹ ನಿಲ್ಲಿಸದೇ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಸರಿಯಾದ ಮಾಹಿತಿಯನ್ನು ಪಡೆದು ಮಾತನಾಡಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ರಾಜ್ಯದಲ್ಲಿ ೫ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವ ನಿಧಿ ಫಲಾನುಭವಿಗಳಿದ್ದಾರೆ. ಅವರೆಲ್ಲರಿಗೂ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.