ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಿದೆ.
ಸರಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಬಾರದು ಎಂದು ಈಗಾಗಲೇ ಸೂಚನೆ ನೀಡಿದ್ದರೂ ವಿದ್ಯಾರ್ಥಿಗಳಿಂದ ಶೌಚಾ ಲಯ ಸ್ವಚ್ಛತೆ ಮಾಡಿಸುತ್ತಿರುವುದು ಮತ್ತು ಇಲಾಖೆ ಸೂಚನೆಗಳನ ಧಿಕ್ಕರಿಸುತ್ತಿರುವುದನ್ನು ಗಮನಿಸಿ ಶಾಲಾ ಶಿಕ್ಷಣ ಆಯುಕ್ತರು ಅತ್ಯಂತ ತುರ್ತು ಸುತ್ತೋಲೆ ಹೊರಡಿಸಿದ್ದಾರೆ.
ಇನ್ನು ಮುಂದೆ ಶಿಕ್ಷಕರು ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛತೆಗೊಳಿಸಿದರೆ ಅಂಥವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಎಫ್ಐಆರ್ ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರಾಗಿಸಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.