ಕೋಲ್ಕತ್ತಾ : ಉತ್ತರ 24 ಪರಗಣ ಜಿಲ್ಲೆಗೆ ಸೇರಿದ ದತ್ತಪುಕುರ್ದಲ್ಲಿ ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ಇಂದು ಭಾರಿ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ದೇಹಗಳು ಕಾರ್ಖಾನೆಯಿಂದ ಹಾರಿ ಹೊರಭಾಗದಲ್ಲಿರುವ ಮರದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದತ್ತಪುಕುರ್ ಪ್ರದೇಶದಲ್ಲಿನ ಈ ಕಾರ್ಖಾನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪವಿದೆ. ಗಣೇಶ ಚತುರ್ಥಿ ಮತ್ತು ದಸರಾ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳ ತಯಾರಿಕೆ ಕಾರ್ಯ ನಡೆಯುತ್ತಿದೆ. ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಡಿಮದ್ದು, ಪಟಾಕಿಗಳನ್ನು ದಾಸ್ತಾನು ಮಾಡಲಾಗಿದ್ದು, ಇವು ಸ್ಫೋಟಗೊಂಡು ದುರಂತ ಸಂಭವಿಸಿತು.
ಪಟಾಕಿ ಕಾರ್ಖಾನೆಯಲ್ಲಿನ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.