ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (೭೯) ವಿಧಿವಶರಾಗಿದ್ದಾರೆ. ಇಂದು ಸಂಜೆ ೪ ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕೆಲ ಸಮಯದ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಬೆಳ್ತಂಗಡಿಯ ಅವರ ನಿವಾಸಕ್ಕೆ ತರಲಾಗುತ್ತದೆ. ನಾಳೆ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ, ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ವಸಂತ ಬಂಗೇರ ಅವರು ಐದು ಬಾರಿ ಶಾಸಕರಾಗಿ ಬೆಳ್ತಂಗಡಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಈ ಮೂರು ಪಕ್ಷಗಳಿಂದಲೂ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಕರ್ನಾಟಕ ವಿಧಾನಸಭೆಯಲ್ಲಿ ಖಾತೆ ತೆರೆದಾಗ ಯಡಿಯೂರಪ್ಪ ಜೊತೆ ವಸಂತ ಬಂಗೇರ ಅವರು ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಜೆಡಿಎಸ್ ನಿಂದಲೂ ಶಾಸಕರಾಗಿ ಆಯ್ಕೆಯಾಗಿದ್ದರು.