ಬೆಂಗಳೂರು: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು (ಅ.೧೨) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕೈ ಹಿಡಿದರು. ಈ ವೇಳೆ ಸಚಿವ ಹೆಚ್.ಕೆ.ಪಾಟೀಲ್, ಶಾಸಕ ಲಕ್ಷ್ಮಣ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ೪೨ ನಾಯಕರು ಅರ್ಜಿ ಹಾಕಿದ್ದಾರೆ ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿರೋಧಿಸಿ ೪೨ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಆಪ್‌ನಿಂದ ಸ್ಪರ್ಧಿಸಿದ್ದ ೧೦೦ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಯಾವುದೇ ಕಂಡೀಷನ್ ಇಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಜಗದೀಶ್ ಶೆಟ್ಟರ್ ಸಾಕಷ್ಟು ಮಾಜಿ ಶಾಸಕರಿಗೆ ಗಾಳ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಾಕಷ್ಟು ಮಂದಿಗೆ ಗಾಳ ಹಾಕಿದ್ದು, ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ ಎಂದರು.
ಇದೇ ವೇಳೆ ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ. ಸ್ವಂತವಾಗಿ ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕ ಮಾಡುತ್ತಿದ್ದಾರೆ. ಯಾರಿಗೂ ಯಾರೂ ಒತ್ತಡ ಹಾಕುತ್ತಿಲ್ಲ. ರಾಜ್ಯದಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಹೇಳಿದರು.