ಮೂಡಿಗೆರೆ: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (೮೭)ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.
ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಡಿ.ಬಿ. ಚಂದ್ರೇಗೌಡ ಅವರು ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ೧೯೮೩-೮೫ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್ ಸದಸ್ಯರಾಗಿ ಮತ್ತು ೩ ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ೧೯೭೧ ರಲ್ಲಿ ಅವರು ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ ೬ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ ೧೯೭೯-೧೯೮೦ ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ೧೯೮೦-೮೧ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.