• ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಕಳವಳ
ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಫೋಕ್ಸೊ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ದಾಖಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಫೋಕ್ಸೊ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಬಾಲ ಕಾರ್ಮಿಕ ಕಾಯ್ದೆ ಕುರಿತ ಅರಿವು ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಯೋಜನೆ ಮತ್ತು ಫೋಕ್ಸೊ ಕಾಯ್ದೆ ಹಾಗೂ ಬಾಲ ಕಾರ್ಮಿಕ ಪದ್ದತಿ ನಿಷೇಧ ಬಗ್ಗೆ ಅರಿವು ಮೂಡಿಸುವ ಪ್ರತಿಯೊಂದು ಗ್ರಾಮಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಬಹಳ ಅವಶ್ಯವಾಗಿದೆ. ಹಳ್ಳಿಗಳಲ್ಲಿ ಫೋಕ್ಸೊ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪ್ರಾಪ್ತರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗುವ ತೊಂದರೆ ಬಗ್ಗೆ ಜನ ಸಾಮಾನ್ಯರಿಗೆ ಅರಿವು ಮೂಡಿಸಿದಾಗ ಮಾತ್ರ ಉತ್ತಮ ಸಮಾಜ ಮತ್ತು ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಫೋಕ್ಸೊ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಬಾಲ ಕಾರ್ಮಿಕ ಕಾಯ್ದೆ ಕುರಿತು ಪ್ರತಿ ಗ್ರಾಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಧಿಕಾರಿ, ಕಂದಾಯ ಅಧಿಕಾರಿ ಮತ್ತು ಸಂಬಂಧಿಸಿದ ಇಲಾಖೆಯವರು ಕಾರ್ಯಕ್ರಮವನ್ನು ಆಯೋಜಿಸಬೇಕು. ಇದರಿಂದ ಜನರಿಗೆ ಮನವರಿಕೆಯಾಗಿ ಬಾಲ್ಯ ವಿವಾಹದಂತಹ ದುಷ್ಕತ್ಯಕ್ಕೆ ಕೈ ಹಾಕುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಕುಮಾರ್ ಜಿ.ಜೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕಾಂತಮ್ಮ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಗಿರೀದಾಸ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್ ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.