Sunday, April 20, 2025
Google search engine

Homeರಾಜ್ಯಸುದ್ದಿಜಾಲಫೆ.2 ರಿಂದ 4 ರವರೆಗೆ ಫಲ-ಪುಷ್ಪ ಪ್ರದರ್ಶನ

ಫೆ.2 ರಿಂದ 4 ರವರೆಗೆ ಫಲ-ಪುಷ್ಪ ಪ್ರದರ್ಶನ

ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಫೆಬ್ರವರಿ 02 ರಿಂದ 04 ರವರೆಗೆ 31ನೇ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಭಾರತ ಸಂವಿಧಾನದ ಬಗ್ಗೆ ಕಲಾಕೃತಿ, ಚಂದ್ರಯಾನ-3, ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು ಫಲ-ಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿರಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.ನಗರದ ಜಿಲ್ಲಾ ತೋಟಗಾರಿಕೆ ಕಚೇರಿಯಲ್ಲಿ ಬುಧವಾರ 31ನೇ ಫಲ-ಪುಷ್ಪ ಪ್ರದರ್ಶನದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ 31ನೇ ಫಲ-ಪುಷ್ಪ ಪ್ರದರ್ಶನ ಆಯೋಜಿಸಿದ್ದು, ಫೆ.2ರಂದು ಸಂಜೆ 6ಕ್ಕೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಫಲ-ಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಫಲ-ಪುಷ್ಪ ಪ್ರದರ್ಶನಕ್ಕೆ ಎಲ್ಲ ಸಾರ್ವಜನಿಕರಿಗೂ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಫಲಪುಷ್ಪ ಪ್ರದರ್ಶನ ವೀಕ್ಷಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ಜಿಲ್ಲಾ ಫಲ-ಪುಷ್ಪ ಪ್ರದರ್ಶನವನ್ನು ಪ್ರತಿ ವರ್ಷವೂ ಆಯೋಜಿಸುತ್ತಿದ್ದು, ವಿವಿಧ ಜಾತಿಯ ಹೂಗಳು, ಹಣ್ಣುಗಳು, ತರಕಾರಿಗಳು, ಮತ್ತು ಹಲವು ವಿಶೇಷ ಬಗೆಯ ಅಲಂಕಾರಿಕಾ ಗಿಡಗಳನ್ನು ಬೆಳೆಸಿ ಪ್ರದರ್ಶಿಸಲಾಗುತ್ತಿದೆ. ಫಲ-ಪುಷ್ಪ ಪ್ರದರ್ಶನದಲ್ಲಿ ಹೂವಿನ ಗಿಡಗಳ ಬೃಹತ್ ಪ್ರದರ್ಶನ, ಇಕೆಬಾನ, ಕುಬ್ಜ ಮರ (ಬೊನ್ಸಾಯ್) ಗಿಡಗಳು, ತರಕಾರಿ ಕೆತ್ತನೆ, ಅಲಂಕಾರಿಕಾ ಗಿಡಗಳ ಜೋಡಣೆ ಹಾಗೂ ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಏರ್ಪಡಿಸಿ, ವಿವಿಧ ಸ್ಪರ್ಧೆಗಳನ್ನು ಸಹ ಹಮ್ಮಿಕೊಳ್ಳಲಾಗುವುದು. ಜೊತೆಗೆ ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಪ್ರದರ್ಶನ ಮಳಿಗೆ, ಸ್ತ್ರೀಶಕ್ತಿ ಸಂಘಗಳ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು: ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಅಂದಿನ ಕಾಲದಲ್ಲಿ ಅತ್ಯುತ್ತಮ ಮಳೆ ನೀರು ಕೊಯ್ಲು ಮಾಡಿ ಅಂದಿನ ಜನ, ಜಾನುವಾರುಗಳಿಗೆ ಹಾಗೂ ಕೃಷಿಗೆ ನೀರನ್ನು ಬಳಸುತ್ತಿದ್ದು, ಪ್ರಸ್ತುತ ಮಳೆ ನೀರು ಕೊಯ್ಲು ಮಾಡುವುದು ಜಿಲ್ಲೆಯ ಕೃಷಿಗೆ ಅವಶ್ಯಕವಾಗಿರುತ್ತದೆ. ಆದುದರಿಂದ, ಸದರಿ ಗೋಪಾಲಸ್ವಾಮಿ ಹೊಂಡ, ಅಕ್ಕತಂಗಿ ಹೊಂಡ, ಸಿಹಿನೀರು ಹೊಂಡ ಹಾಗೂ ಸಂತೆಹೊಂಡಗಳು ಒಂದಕ್ಕೊಂದು ಸಂಪರ್ಕಿಸಿರುವ ಮಾದರಿಗಳನ್ನು ಪ್ರದರ್ಶಿಸಲಾಗುವುದು ಎಂದರು.

ವಿವಿಧ ಪುಷ್ಪ ಜೋಡಣೆಗಳಿಗೆ ಹಲವು ಬಗೆಯ ವಿಶೇಷ ಹೂಗಳನ್ನು ಬಳಸುತ್ತಿರುವುದರ ಜೊತೆಗೆ ಕುಂಡದಲ್ಲಿ ಬೆಳೆದ ಚಿತ್ತಾಕರ್ಷಕ ವರ್ಣಗಳಿಂದ ಕೂಡಿದ ಸುಮಾರು 50ಕ್ಕೂ ಹೆಚ್ಚು ಬಗೆಯ ವಿವಿಧ ಜಾತಿಯ ಆರ್ಕಿಡ್ಸ್, ಕಾರ್ನೇಶನ್, ಕಾಕ್ಸ್ ಕೂಂಬ್, ಸೆಲೋಶಿಯಾ, ಪ್ಲಾಕ್ಸ್, ಗಾಕ್ಸೀನಿಯ, ಕಲಂಚಾ, ಲಿಲ್ಲಿಸ್, ಇಂಪೇಷನ್ಸ್ (ಮಿಕ್ಸ್‍ಡ್), ಡೇಲಿಯಾ (ಡ್ವಾರ್ಫ್), ಸಾಲ್ವಿಯಾ (ಕೆಂಪು, ನೀಲಿ ಕೇಸರಿ, ಬಿಳಿ) ಚೆಂಡು ಹೂ, ಚಿಂತಾಮಣಿ ಚೆಂಡು ಹೂ, ಜಿನಿಯಾ, ಪೆಟೂನಿಯಾ, ಕಾಸ್‍ಮಾಸ್, ಬಾಲ್ಸಂ, ಜಿರೇನಿಯಂ, ಹಾಲಿಹಾಕ್, ಆಂಟಿರಿನಮ್, ಡಯಾಂತಸ್, ಕ್ಯಾಲೊಂಡೋಲಾ, ಸೇವಂತಿಗೆ, ಪೆಂಟಾಸ್, ಫ್ಯಾನ್ಸಿ, ಇಪೋರ್ಬಿಯ ಮಿಲ್ಲಿ, ಫಾಯಿನ್‍ಸಿಟಿಯಾ, ಬಿಗೋನಿಯಾ, ವಿಂಕಾ, ಆಂತೋರಿಯಂ ಇತ್ಯಾದಿ ವಿವಿಧ ಪುಷ್ಪ ಸಸಿಗಳು, ನೂರಕ್ಕೂ ಹೆಚ್ಚು ಬಗೆಯ ತಳಿಗಳು, ಪ್ರದರ್ಶಿಸುವುದರೊಂದಿಗೆ ಪುಷ್ಪ ರಸಿಕರಿಗೆ ಪ್ರದರ್ಶನ ಮುದ ನೀಡಲಿದೆ ಎಂದು ತಿಳಿಸಿದರು.

ಪ್ರದರ್ಶನದ ಅಂಗವಾಗಿ ನಗರದ ಶಾಲಾ ಮಕ್ಕಳಿಗೆ ಜಾನಪದ ಹಾಗೂ ಭಾವಗೀತೆ ಸ್ಪರ್ಧೆ, ಚಿತ್ರಕಲಾ ಸ್ಟರ್ಧೆ, ಪ್ರಬಂಧ ಸ್ಪರ್ದೆ, ಹಣ್ಣು ಮತ್ತು ಹೂ ತರಕಾರಿಗಳನ್ನು ಬಳಸಿ ಪ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚಿಕ್ಕ ಮಕ್ಕಳಿಗೆ ಹಣ್ಣು ಮತ್ತು ತರಕಾರಿಗಳ ಗುರುತಿಸುವ ಸ್ಪರ್ಧೆ, ತರಕಾರಿ ಕೆತ್ತನೆ, ಹೂ ಜೋಡಣೆ ಸ್ಪರ್ಧೆ, ಬೋನ್ಸಯ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಆಕರ್ಷಕ ಬಹುಮಾನ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ.ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಪದನಿಮಿತ್ತ ಕಾರ್ಯದರ್ಶಿ ಬಿ.ದೇವರಾಜು, ಜಿಲ್ಲಾ ತೋಟಗಾರಿಕೆ ಸಂಘದ ಖಜಾಂಚಿ ನಾಗರಾಜ ಬೇದ್ರೆ ಇದ್ದರು.

RELATED ARTICLES
- Advertisment -
Google search engine

Most Popular