ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹಾಗೂ ಹುಲಿ ದಾಳಿಯಿಂದ ಜಿಲ್ಲೆಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ವನ್ಯ ಪ್ರಾಣಿಗಳ ಹಾವಳಿ ತಡೆಯುವಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಸಂಬಂಧ ವಿಷಯ ಪ್ರಸ್ತಾಪಿಸಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಇರುವ ಕಡೆಗಳಲ್ಲಿ ಬ್ಯಾರಿಕೇಡ್, ತಂತಿಬೇಲಿ, ಟ್ರಂಚ್ ನಿರ್ಮಾಣ ಮಾಡಬೇಕು. ದಕ್ಷಿಣ ಕೊಡಗಿನ ಭಾಗದಲ್ಲಿ ಆಗಾಗ ಹುಲಿ ದಾಳಿ ನಡೆಯುತ್ತಿದ್ದು, ಇದರಿಂದ ಜನ ಜಾನುವಾರುಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು. ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಪರಿಸ್ಥಿತಿ ಸುಧಾರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರು ಕೊಡಗು ಜಿಲ್ಲೆಯ ತೋಟಗಳಲ್ಲಿ ೨೦೦ ರಿಂದ ೨೫೦ ಕಾಡಾನೆಗಳು ವಾಸಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಕಾಡಾನೆ ಹಾವಳಿಯಿಂದ ಬೆಳೆ ಹಾನಿಯಾದಲ್ಲಿ ಬೆಳೆ ಹಾನಿ ಪರಿಹಾರ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಅವರು ಶೇ.೮೦ ರಷ್ಟು ಕಾಡಾನೆಗಳು ಕಾಫಿ ತೋಟಗಳಲ್ಲಿ ಸುತ್ತಾಡಿಕೊಂಡಿವೆ. ಕಳೆದ ೧೫ ವರ್ಷಗಳಿಂದ ಕಾಡಾನೆಗಳು ಸಹ ಹೆಚ್ಚಾಗಿದ್ದು, ಇದನ್ನು ನಿಯಂತ್ರಣ ಮಾಡಬೇಕು. ಜೊತೆಗೆ ಕಾಡಾನೆಗಳಿಗೆ ಆಹಾರ, ನೀರು ಸಿಗುತ್ತಿಲ್ಲ. ಆದ್ದರಿಂದ ಬಿದಿರು ಗಿಡವನ್ನು ಹೆಚ್ಚು ನೆಡಬೇಕು ಎಂದು ಬಾಂಡ್ ಗಣಪತಿ ಅವರು ಸಲಹೆ ಮಾಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕವನ್ನು ೨೦೨೪ ರೊಳಗೆ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನಾ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ತಪ್ಪು ಮಾಹಿತಿ ನೀಡಿದ್ದಲ್ಲಿ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.
ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೆ ಮುಂದಾಗುವಂತೆ ಸಚಿವರು ನಿರ್ದೇಶನ ನೀಡಿದರು. ಈ ಕುರಿತು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾತನಾಡಿ ೨೦೨೪ ರ ಡಿಸೆಂಬರ್ ಒಳಗೆ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕಿದೆ. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ತಾ.ಪಂ.ಇಒಗಳೇ ಹೆಚ್ಚಿನ ಹೊಣೆಗಾರಿಕೆ ವಹಿಸಬೇಕು ಎಂದು ಸೂಚಿಸಿದರು. ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಗುಣಮಟ್ಟದ ಬಿತ್ತನೆ ಬೀಜ ಪೂರೈಸಬೇಕು. ದೂರು ಬರದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಉಂಟಾಗದಂತೆ ಕೂಡಲೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಕಳ್ಳಿಚಂಡ ಕಾರ್ಯಪ್ಪ ಅವರು ೩೫ ತಜ್ಞ ವೈದ್ಯರು ಬೇಕಿದೆ. ಹಾಗೆಯೇ ಅರವಳಿಕೆ ತಜ್ಞ ವೈದ್ಯರು ಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ತಜ್ಞ ವೈದ್ಯರ ಭರ್ತಿಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ವಿಶೇಷ ಗಮನಹರಿಸುವಂತೆ ಸಚಿವರು ಸೂಚಿಸಿದರು. ಶಾಸಕರಾದ ಮಂತರ್ ಗೌಡ ಅವರು ಮಾತನಾಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಲ್ಲಿ ಮುಂದಾಗಬೇಕು. ಶಾಲಾ ದಾಖಲಾತಿ ಆಂದೋಲನ, ಸೇತುಬಂಧ ಕಾರ್ಯಕ್ರಮ, ನಲಿಕಲಿ, ಬಿಸಿಯೂಟ, ಸಮವಸ್ತ್ರ ಹೀಗೆ ಹಲವು ಯೋಜನೆಗಳನ್ನು ಸರ್ಕಾರ ನೀಡುತ್ತಿದ್ದು, ಯೋಜನೆಗಳನ್ನು ಸದ್ಭಳಕೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಗಳಾಗಿ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಶಾಸಕರು ಸಲಹೆ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಕಳೆದ ಮಾರ್ಚ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆ ಶೇ.೯೩.೧೭ ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ ೯ ನೇ ಸ್ಥಾನ ಗಳಿಸಿದೆ ಎಂದು ತಿಳಿಸಿದರು.
ಕುಶಾಲನಗರ ನ್ಯಾಯಾಲಯ ಕಟ್ಟಡ, ಬಾಣಾವಾರ-ಸೋಮವಾರಪೇಟೆ ರಸ್ತೆ ಕಾಮಗಾರಿ ಬಗ್ಗೆ ಶಾಸಕರಾದ ಮಂತರ್‌ಗೌಡ ಅವರು ಮಾಹಿತಿ ಪಡೆದರು. ಭಾಗಮಂಡಲ-ಕರಿಕೆ ರಸ್ತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಭಾಗಮಂಡಲ-ಕರಿಕೆ ರಸ್ತೆ ಸುಧಾರಿಸಬೇಕಿದೆ ಎಂದು ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದೇಗೌಡ ಅವರು ಭಾಗಮಂಡಲ-ಕರಿಕೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಭಾಗಮಂಡಲ ಮೇಲುಸೇತುವೆ ಬಗ್ಗೆ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸೇತುವೆ ಸಾರ್ವಜನಿಕರ ಉಪಯೋಗಕ್ಕೆ ಬರಬೇಕು. ಮೀನ ಮೇಷ ಎನಿಸಬಾರದು ಎಂದು ಎಂಜಿನಿಯರ್‌ಗೆ ಸೂಚಿಸಿದರು. ಜಿಲ್ಲೆಯಲ್ಲಿನ ಬಾಕಿ ಇರುವ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಚಿವರು ಸೂಚಿಸಿದರು. ಜಿಲ್ಲೆಯ ೨೫೦ ಹಾಡಿಗಳಿದ್ದು, ಇದರಲ್ಲಿ ಶೇ.೭೫ ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ೧೬೧ ಹಾಡಿಗಳಿದ್ದು, ನಿಯಮಾನುಸಾರ ಅರಣ್ಯ ಹಕ್ಕುಪತ್ರ ನಿಡಲಾಗಿದೆ ಎಂದು ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಲಾಗಿದೆ. ಆ ನಿಟ್ಟಿನಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾದ ಹರ್ಷಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಹಲವು ಮಾಹಿತಿ ನೀಡಿದರು.